ನವದೆಹಲಿ : ಕದನ ವಿರಾಮವನ್ನು ಭಾರತ ಕೂಡ ಖಚಿತಪಡಿಸಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಚುಟುಕು ಸುದ್ದಿಗೋಷ್ಠಿ ನಡೆಸಿ ಕದನ ವಿರಾಮಕ್ಕೆ ಭಾರತ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು. ಪಾಕ್ ಈ ಬಗ್ಗೆ ಮೊದಲು ಪ್ರಸ್ತಾಪ ಮಾಡಿತ್ತು. ಇದನ್ನು ಭಾರತ ಒಪ್ಪಿಕೊಂಡಿದ್ದು, ಇಂದು ಸಂಜೆ ಐದರಿಂದಲೇ ಕದನ ವಿರಾಮ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದು, ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ DGMO ಗೆ ಕರೆ ಮಾಡಿದರು. ಭಾರತೀಯ ಸಮಯ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದಿದೆ. ಮೇ 12 ರಂದು DGMO ಗಳ ಮಟ್ಟದಲ್ಲಿ ಮಹತ್ವದ ಮಾತುಕತೆ ನಡೆಯಲಿದೆ ಎಂದು ಉನ್ನತ ಮಟ್ಟದ ಮಾಹಿತಿ ದೊರೆತಿದೆ.
ಪಾಕಿಸ್ತಾನ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮ ಘೋಷಿಸಲಾಗಿದೆ ಎಂದು ದೃಢಪಡಿಸಿದ್ದಾರೆ.ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಸುರಕ್ಷತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ದಾರ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.