ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದು, ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ ಸುಮಾರು 10 ವರ್ಷಗಳ ಕೊಲೆ ಪ್ರಕರಣಗಳನ್ನು ವಿಶ್ಲೇಷಣೆ ಮಾಡಿದಾಗ ಕೊಲೆ ಆರೋಪಿಗಳು ಮತೀಯ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ ಕಾರ್ಯಚಟುಟಿಕೆಗಳ ಬಗ್ಗೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅವರ ಹೆಸರನ್ನು ಪಟ್ಟಿ ಮಾಡಿ ಪರಿಶೀಲನೆಗೆ ನಿರ್ದೇಶನ ನೀಡಲಾಗಿದೆ.
ಈ ಪ್ರತಿಬಂಧಕ ಕಾರ್ಯವವನ್ನು ನಿರಂತರವಾಗಿ ನಾವು ಮಾಡುತ್ತಿದ್ದು, ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ರವಿವಾರ ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆ ಎದುರು ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಕಡಬ ಠಾಣೆಯಲ್ಲಿ 189(2) 180 ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪೊಲೀಸರು ನಡೆಸುತ್ತಿರುವ ಪ್ರತಿಬಂಧಕ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಹಜ ಸ್ಥಿತಿಗೆ ಮರುಕಳಿಸುವವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.