ಸಿ ಎಂ ಸಿದ್ದರಾಮಯ್ಯ ತನ್ನ ಮೇಲಿನ ಆರೋಪದ ಹಿನ್ನಲೆ ಹೈಕೋರ್ಟು ತೀರ್ಪಿನ ನಂತರ ಮೊದಲ ಪತ್ರಿಕಾ ಪ್ರಕಟಣೆಯಲ್ಲಿ, " ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ" ಎಂದಿದ್ದಾರೆ.
ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.
-ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
-ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
-ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.
- ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ.
- ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.
-ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ
- ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.
-ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.
- ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.
- ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.
- ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.
- ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.
-ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.
-ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.
-ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು.
-ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.
-ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ.
-ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.