image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲೋಕಸಭೆಯಲ್ಲಿ ದಕ್ಷಿಣ ಕನ್ನಡದ ಅಭಿವೃದ್ಧಿ ಹಾಗೂ ರಾಷ್ಟ್ರೀಯ ಭದ್ರತೆಗಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಧ್ವನಿ

ಲೋಕಸಭೆಯಲ್ಲಿ ದಕ್ಷಿಣ ಕನ್ನಡದ ಅಭಿವೃದ್ಧಿ ಹಾಗೂ ರಾಷ್ಟ್ರೀಯ ಭದ್ರತೆಗಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಧ್ವನಿ

ನವದೆಹಲಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ರಾಷ್ಟ್ರೀಯ ಭದ್ರತೆ, ದಕ್ಷಿಣ ಕನ್ನಡದ ಮೂಲಸೌಕರ್ಯ ಮತ್ತು ಸಹಕಾರಿ ಒಕ್ಕೂಟ ವ್ಯವಸ್ಥೆಯ ಕುರಿತು ಮಹತ್ವದ ವಿಚಾರಗಳನ್ನು ಮಂಡಿಸಿದರು.
​ಕೇಂದ್ರ ಸರ್ಕಾರದ ಜಿಎಸ್‌ಟಿ ಸುಧಾರಣೆಗಳು ಸಾಮಾನ್ಯ ಜನರ ಬದುಕನ್ನು ಸುಗಮಗೊಳಿಸಿವೆ ಎಂದು ಶ್ಲಾಘಿಸಿದ ಅವರು, ಸುಭದ್ರ ಆರ್ಥಿಕತೆಯೇ ಸಶಸ್ತ್ರ ಪಡೆಗಳ ಆಧುನೀಕರಣಕ್ಕೆ ಅಡಿಪಾಯ ಎಂದರು. ವಿಶೇಷವಾಗಿ, ಸೇವಾವಧಿಯಲ್ಲಿ ಗಂಭೀರವಾಗಿ ಗಾಯಗೊಂಡರೂ ನಿವೃತ್ತಿಯವರೆಗೆ ಸೇವೆ ಸಲ್ಲಿಸುವ ಸೈನಿಕರಿಗೂ ವಿಕಲಚೇತನರ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಹಣಕಾಸು ಸಚಿವರಿಗೆ ಮನವಿ ಮಾಡಿದರು.
​ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ಬಡವರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಜಿಲ್ಲೆಯ ಕರಾವಳಿ ಭಾಗದ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ವೈಜ್ಞಾನಿಕ ಪರಿಹಾರಕ್ಕಾಗಿ ವಿಶೇಷ ಅನುದಾನ ನೀಡುವಂತೆ ಒತ್ತಾಯಿಸಿದರು.
​ಇದೇ ವೇಳೆ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಅನಿವಾರ್ಯತೆಯನ್ನು ಪ್ರತಿಪಾದಿಸಿದ ಅವರು, ಮಂಗಳೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ, ಮಂಗಳೂರು ಬೈಪಾಸ್ ಕಾಮಗಾರಿಗಳಿಗೆ ವೇಗ ನೀಡಲು ವಿನಂತಿಸಿದರು. ಮಂಗಳೂರು ನಗರವನ್ನು 'ಸಿಟಿ ಎಕನಾಮಿಕ್ ರೀಜನ್' ಯೋಜನೆಗೆ ಒಳಪಡಿಸುವಂತೆ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Category
ಕರಾವಳಿ ತರಂಗಿಣಿ