ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4.05ಕ್ಕೆ ಬೆಂಗಳೂರಿನ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ರಾಜ್ಯದ ಜನತೆಗೆ ನೇರವಾಗಿ ತಲುಪಿಸುವ ಉದ್ದೇಶದಿಂದ, ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಹಯೋಗದಲ್ಲಿ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದ್ದು, ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಪರದೆಗಳ ಮೂಲಕ ಸಾರ್ವಜನಿಕರು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. ಪ್ರಯಾಣಿಕರು ಮತ್ತು ಸಾಮಾನ್ಯ ಜನರು ಈ ಮಹತ್ವದ ವಿದ್ಯಮಾನದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗಿದ್ದು, ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ.