ಬಂಟ್ವಾಳ: ಹುಬ್ಬಳ್ಳಿಯಲ್ಲಿ ಕಲ್ಲೆಸೆತ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ಕೈ ಬಿಡಲು ರಾಜ್ಯದ ಗೃಹ ಸಚಿವರ ನೇತೃತ್ವದ ಸಮಿತಿ ಶಿಫಾರಸು ಮಾಡಿದ ಪ್ರಕಾರ ರಾಜ್ಯ ಸರಕಾರ ತೀರ್ಮಾನ ಮಾಡಿರುವುದು ಅಕ್ಷಮ್ಯ ಅಪರಾಧ. ಕಾಂಗ್ರಸ್ ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ. ಇದರ ವಿರುದ್ಧ ಬಿಜೆಪಿ ಹುಬ್ಬಳ್ಳಿಯಲ್ಲಿ ಅ.25ರಂದು ಪ್ರತಿಭಟನೆ ಮಾಡಲು ತೀರ್ಮಾನಿಸಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಅವರು ಬಂಟ್ವಾಳದ ಬಂಟರ ಭವನದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯ ಕರ್ತರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದಲ್ಲಿ ವ್ಯಾಪಕವಾದ ಹಗರಣಗಳು ಭೃಷ್ಟಾಚಾರ ನಡೆಯುತ್ತಿದೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಮುಖ್ಯ ಮಂತ್ರಿಗಳು ಮೂಡಾ ಹಗರಣದ ಆರೋಪ ಎದುರಿಸುತ್ತಿದ್ದಾರೆ. ಅಭಿವೃದ್ಧಿ ಕುಂಠಿತವಾಗಿದ್ದು, ಸರಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವನ್ನು ವಜಾ ಮಾಡಲು ರಾಷ್ಟ್ರಪತಿಗಳ ಬಳಿ ತೆರಳುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಕರ್ನಾಟಕ ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ, ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ ,ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ರಾಜೇಶ್ ನಾಯ್ಕ್ , ವೇದವ್ಯಾಸ ಕಾಮತ್, ಹರೀಶ್ ಪೂಂಜ, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಬಿಜೆಪಿ ವಿದಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಪ್ರಭಾರಿ ಉದಯ ಕುಮಾರ್ , ಜಿಲ್ಲಾ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಪ್ರೇಮಾನಂದ ಶೆಟ್ಟಿ, ಮೊದಲಾದ ವರು ಉಪಸ್ಥಿತರಿದ್ದರು.