ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದ್ದು, ಈ ಸಭೆಯಲ್ಲಿ ಕೇವಲ ಹೊಸ ಯೋಜನೆಗಳನ್ನು ಘೋಷಿಸಿದರೆ ಸಾಲದು, ಅವುಗಳ ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನವನ್ನೂ ಸರ್ಕಾರ ತಕ್ಷಣವೇ ಘೋಷಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಜಿಲ್ಲೆಯ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಹಿತರಕ್ಷಣೆಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. ಕರಾವಳಿಯ ಜಾನಪದ ಹಾಗೂ ಸಾಂಸ್ಕೃತಿಕ ಪರಂಪರೆಯ ಭಾಗವಾಗಿರುವ 'ತುಳು' ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು 'ಮಂಗಳೂರು ಜಿಲ್ಲೆ' ಎಂದು ಅಧಿಕೃತವಾಗಿ ಘೋಷಿಸಬೇಕು ಎಂದು ಆಗ್ರಹಿಸಿದರು.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಧಾರ್ಮಿಕ ಪ್ರವಾಸೋದ್ಯಮ ನೀತಿಯನ್ನು ಘೋಷಿಸಬೇಕು. ಜೊತೆಗೆ, ಮಂಗಳೂರಿನ ಅನನ್ಯ ಸಂಸ್ಕೃತಿಗೆ ಯಾವುದೇ ಭಂಗ ಬಾರದಂತೆ ಹಾಗೂ ಸ್ಥಳೀಯ ಮೀನುಗಾರರ ಜೀವನೋಪಾಯಕ್ಕೆ ಪೂರಕವಾದ ಪ್ರವಾಸೋದ್ಯಮ ನೀತಿಯನ್ನು ರೂಪಿಸುವುದು ಅತ್ಯಗತ್ಯವಾಗಿದೆ ಎಂದರು.
ಜಿಲ್ಲೆಯ ಕ್ರೀಡೆ ಹಾಗೂ ಪರಂಪರೆಯ ಕುರಿತು ಪ್ರಸ್ತಾಪಿಸಿದ ಅವರು, ಈ ಹಿಂದೆ ಕಂಬಳ ಕ್ರೀಡೆಗೆ ಸರ್ಕಾರ ನೀಡುತ್ತಿದ್ದ 5 ಲಕ್ಷ ರೂಪಾಯಿ ಅನುದಾನವು ಪ್ರಸ್ತುತ ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ ಕಂಬಳಕ್ಕೆ ನೀಡುವ ಅನುದಾನವನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಿ ವ್ಯವಸ್ಥಿತವಾಗಿ ಬಿಡುಗಡೆ ಮಾಡಬೇಕು. ಅಲ್ಲದೆ, ವೀರರಾಣಿ ಅಬ್ಬಕ್ಕ ಅವರ ಹೆಸರಿನಲ್ಲಿ 1 ಕೋಟಿ ರೂಪಾಯಿ ಅನುದಾನ ನೀಡಿ ಜಿಲ್ಲಾ ಉತ್ಸವವನ್ನು ಆಯೋಜಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ನ್ಯಾಯಾಂಗ ಹಾಗೂ ಸಾಮಾಜಿಕ ಅಭಿವೃದ್ಧಿಯ ದೃಷ್ಟಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವುದು ಅಗತ್ಯವಾಗಿದೆ. ಇದರೊಂದಿಗೆ ಎಸ್‌ಸಿ ಮತ್ತು ಎಸ್‌ಟಿ ಕಾಲನಿಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು. ನಾರಾಯಣ ಗುರು ನಿಗಮ, ಬಂಟರ ನಿಗಮ ಹಾಗೂ ಅರೆಭಾಷೆ ಒಕ್ಕಲಿಗ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ತಡೆಹಿಡಿಯಲಾದ ಅನುದಾನವನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಶಾಸಕರಾದ ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್, ಪಕ್ಷದ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಸಂಜಯ್ ಪ್ರಭು, ಅರುಣ್ ಶೇಟ್ ಮತ್ತು ವಸಂತ್ ಪೂಜಾರಿ ಉಪಸ್ಥಿತರಿದ್ದರು.