image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪರಿಶಿಷ್ಟರ ಅಭಿವೃದ್ಧಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರಕಾರ ಚಿಂತನೆ: ಸಚಿವ ಕೆ.ಎಚ್. ಮುನಿಯಪ್ಪ

ಪರಿಶಿಷ್ಟರ ಅಭಿವೃದ್ಧಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರಕಾರ ಚಿಂತನೆ: ಸಚಿವ ಕೆ.ಎಚ್. ಮುನಿಯಪ್ಪ

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಬಡ ಜನರಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ಬಡವರಿಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದರು. ಭೂ ಒಡೆತನ ಯೋಜನೆಯ ಮೂಲಕ ಭೂಮಿ ಇಲ್ಲದ ಪರಿಶಿಷ್ಟರಿಗೆ ಜಮೀನು ಒದಗಿಸಲು ಕ್ರಮ ವಹಿಸಲಾಗಿದೆ ಹಾಗೂ ನಿರಾಶ್ರಿತರಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾತನಾಡಿದ ಸಚಿವರು, ಬೇಡಿಕೆಗೆ ತಕ್ಕಂತೆ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯ ಹಾಗೂ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಶೇ.90 ಕ್ಕಿಂತ ಅಧಿಕ ಅಂಕಗಳೊಂದಿಗೆ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ, ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ವಿವಿಧ ಇಲಾಖೆಗಳ ಮೂಲಕ ಶೇ.24 ರಷ್ಟು ಅನುದಾನ ನೇರವಾಗಿ ಪರಿಶಿಷ್ಟರಿಗೆ ತಲುಪುತ್ತಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ 4 ಕೋಟಿ ರೂ., ತಾಲೂಕು ಮಟ್ಟದಲ್ಲಿ 2 ಕೋಟಿ ರೂ., ಹೋಬಳಿ ಮಟ್ಟದಲ್ಲಿ 85 ಲಕ್ಷ ರೂ. ಹಾಗೂ ಪಂಚಾಯತ್ ಮಟ್ಟದಲ್ಲಿ 20 ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಗ್ರಂಥಾಲಯಗಳ ನಿರ್ಮಾಣಕ್ಕೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ