ದೆಹಲಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಚುನಾವಣಾ ಆಯೋಗದ ಧೋರಣೆಯನ್ನು ಖಂಡಿಸಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ 'ಮಂಡಿ ಹೌಸ್ ಚಲೋ' ಪ್ರತಿಭಟನಾ ಮೆರವಣಿಗೆಯಲ್ಲಿ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ಮಹತ್ವದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಶ್ರೀ ವಸಂತ್ ಕುಮಾರ್ ಮತ್ತು ರಾಜ್ಯ ಸರ್ಕಾರದ ಸಚಿವ ಶ್ರೀ ಶರಣು ಪ್ರಕಾಶ್ ಪಾಟೀಲ್ ರವರು ಉಪಸ್ಥಿತರಿದ್ದು ಪ್ರಮುಖ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯದಿಂದ ದೆಹಲಿಗೆ ಆಗಮಿಸಿದ್ದ ಸಚಿವರು, ಮಾಜಿ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಶಾಸಕರು ಹಾಗೂ ಪಕ್ಷದ ವಿವಿಧ ಹಂತದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೆಹಲಿಯ ಮಂಡಿ ಹೌಸ್ ಪ್ರದೇಶದಲ್ಲಿ ಜಮಾಯಿಸಿದ ನಾಯಕರು, ಕೇಂದ್ರದ ಆಡಳಿತಾರೂಢ ಸರ್ಕಾರದ ಧೋರಣೆಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಎಂದಿಗೂ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ತಿಳಿಸಿದರು. ರಾಜ್ಯದ ಕಾಂಗ್ರೆಸ್ ನಾಯಕರ ಈ ಬೃಹತ್ ಭಾಗವಹಿಸುವಿಕೆಯು ದೆಹಲಿಯ ಪ್ರತಿಭಟನೆಯಲ್ಲಿ ರಾಜ್ಯದ ಪ್ರಬಲ ಉಪಸ್ಥಿತಿ ಮತ್ತು ಒಗ್ಗಟ್ಟನ್ನು ಎತ್ತಿಹಿಡಿಯಿತು.