ಮಂಗಳೂರು: ಬಡವರ ಸಮಸ್ಯೆಗಳಿಗೆ ಪರಿಹಾರ ನೀಡಲು ಯೋಗ್ಯತೆಯಿಲ್ಲದ ರಾಜ್ಯದ ಕಾಂಗ್ರೆಸ್ ಸರಕಾರವನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ, ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪರಿಸರದಲ್ಲಿ 'ನಮ್ಮ ಹಕ್ಕು ನಮಗೆ ನೀಡಿ' ಎಂಬ ಘೋಷಣೆಯೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಉಚಿತ ಭಾಗ್ಯಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ, ಈಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸಮರ್ಪಕವಾಗಿ ಜಮೆ ಮಾಡುತ್ತಿಲ್ಲ. ಮಹಿಳೆಯರಿಗೆ ಸೇರಬೇಕಾದ ಹಣ ಎಲ್ಲಿ ಹೋಯಿತು? ಆ ಹಣ ಯಾರ ಜೇಬಿಗೆ ಸೇರಿದೆ? ಎಂಬುದಕ್ಕೆ ಸರಕಾರ ತಕ್ಷಣ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಡವರು ಮತ್ತು ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಟೀಕಿಸಿದರು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಸಂಕಷ್ಟಕ್ಕೆ ತಳ್ಳುತ್ತಿರುವ ಸರಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ ಎಂದು ಅವರು ಎಚ್ಚರಿಸಿದರು.
ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಬಿಜೆಪಿ ವಕ್ತಾರ ವಿಕಾಸ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಅಡ್ಯಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕಮಲಾಕ್ಷ ತಲ್ಲಿಮಾರ್, ಉಳಾಯಿಬೆಟ್ಟು ಗ್ರಾಮದ ನಿಕಟಪೂರ್ವ ಅಧ್ಯಕ್ಷ ಹರಿಕೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ ಹಾಗೂ ರಣದೀಪ್ ಕಾಂಚನ್ ಉಪಸ್ಥಿತರಿದ್ದರು.
ಅಲ್ಲದೆ, ಜಿಲ್ಲೆಯ ಸಹಸಂಚಾಲಕ ಲೋಹಿತ್ ಅಮಿನ್, ಎಸ್.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಸುಮಿತ್ರಾ ಕರಿಯ, ಹಿರಿಯ ನಾಗರಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಮ ಅಮೀನ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಮುಖ ಉಮೇಶ್ ಕೋಟ್ಯಾನ್, ನಿಕಟಪೂರ್ವ ಮಹಾನಗರ ಪಾಲಿಕೆ ಮೇಯರ್, ಪಂಚಾಯತ್ ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.