ಮಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಸುಳ್ಳು ಅಪಪ್ರಚಾರ ಹಾಗೂ ಪ್ರತಿಭಟನೆಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಯತ್ನದ ವಿರುದ್ಧ ಜಿಲ್ಲಾದ್ಯಂತ ಬ್ಲಾಕ್ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ಜನಾಂದೋಲನ ರೂಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪದ್ಮರಾಜ್ ತಿಳಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಅಸ್ತ್ರವನ್ನಿಟ್ಟುಕೊಂಡು ಪ್ರತಿಭಟನೆಗೆ ಇಳಿದಿರುವ ಬಿಜೆಪಿ ನಾಯಕರಿಗೆ ನೈತಿಕತೆಯಿಲ್ಲ. ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವುದು ಸಂಪೂರ್ಣವಾಗಿ ಹಾಲು ಉತ್ಪಾದಕ ರೈತರ ಹಿತರಕ್ಷಣೆ ಮತ್ತು ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದಾಗಿದೆ. ಈ ನಿರ್ಧಾರವನ್ನು ವಿಧಾನಸೌಧದ ಸದನದಲ್ಲೇ ಒಮ್ಮತದಿಂದ ಕೈಗೊಳ್ಳಲಾಗಿದ್ದು, ದರ ಏರಿಕೆಯಿಂದ ಬಂದ ಹೆಚ್ಚುವರಿ ಹಣ ನೇರವಾಗಿ ಹಾಲು ಉತ್ಪಾದಕ ರೈತರ ಕೈಸೇರುತ್ತಿದೆ. ಇದನ್ನು ಮರೆತು ಬಿಜೆಪಿ ಜನಪ್ರತಿನಿಧಿಗಳು ಕೇವಲ ಚುನಾವಣೆಯನ್ನು ಗೆಲ್ಲುವ ಏಕೈಕ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರದ ನಿರಂತರ ಇಂಧನ ದರ ಏರಿಕೆಯೇ ಸಾರಿಗೆ ಸಂಸ್ಥೆಗಳ ಮೇಲಿನ ವೆಚ್ಚ ಹೆಚ್ಚಾಗಲು ಮುಖ್ಯ ಕಾರಣ. ಬಿಜೆಪಿ ಆಡಳಿತದ ಅವಧಿಯಲ್ಲಿ ಕೆಎಸ್ಆರ್ಟಿಸಿ ಸುಮಾರು 5,800 ಕೋಟಿ ರೂಪಾಯಿ ಸಾಲದ ಸುಳಿಗೆ ಸಿಲುಕಿತ್ತು ಮತ್ತು ಸಿಬ್ಬಂದಿಗಳು ಸೌಲಭ್ಯಗಳಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಈ ಸಂಸ್ಥೆಯ ಸಾಲದ ಹೊರೆಯನ್ನು 5,300 ಕೋಟಿಗೆ ತಗ್ಗಿಸಿ, ಅತ್ಯಂತ ದಕ್ಷ ಹಾಗೂ ಸುವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸುತ್ತಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಅತ್ಯುತ್ತಮ ಗುಣಮಟ್ಟದ ಸೌಲಭ್ಯ ಹಾಗೂ ಸೇವೆಗಳನ್ನು ಒದಗಿಸಿ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದ್ದು, ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವೇ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಡೆಗಣಿಸಿ ಅರಾಜಕತೆಯನ್ನು ಸೃಷ್ಟಿಸುತ್ತಿದೆ. ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಾದ ನ್ಯಾಯಯುತ ಸೌಲಭ್ಯಗಳು ಹಾಗೂ ಅನುದಾನಗಳನ್ನು ತರುವಲ್ಲಿ ರಾಜ್ಯದ ಬಿಜೆಪಿ ಎಂಪಿಗಳು ಸಂಪೂರ್ಣವಾಗಿ ವಿಫಲರಾಗಿದ್ದು, ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿ ಎತ್ತದೆ ಮೌನಕ್ಕೆ ಶರಣಾಗಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಚುನಾವಣಾ ಆಯೋಗ ಮತ್ತು ಮಾಧ್ಯಮಗಳನ್ನು ಬಳಸಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ.
ಈ ಎಲ್ಲ ನೈಜ ವಿಚಾರಗಳು ಹಾಗೂ ಬಿಜೆಪಿ ನಾಯಕರ ಸುಳ್ಳು ಭರವಸೆಗಳ ಹಿಂದಿರುವ ಸತ್ಯಾಸತ್ಯತೆಯನ್ನು ಸಾರ್ವಜನಿಕರ ಮುಂದಿಡಲು ಕಾಂಗ್ರೆಸ್ ನಿರ್ಧರಿಸಿದೆ. ಮುಂದಿನ 4-5 ದಿನಗಳಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಲೂ ಪತ್ರಿಕಾಗೋಷ್ಠಿಗಳನ್ನು ನಡೆಸಿ, ತದನಂತರ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಕಾರ್ಯಕರ್ತರು ಮತ್ತು ನಾಯಕರ ನೇತೃತ್ವದಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಡಲಿದೆ ಎಂದು ಅವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉದಯಕುಂದರ್, ಸಲಿಂ,ನೀರಜ್ ಪಾಲ್, ಅಪ್ಪಿ, ಟಿಕೆ ಸುದೀರ್,ಪ್ರಕಾಶ್ ಸಾಲ್ಯಾನ್ ಉಪಸ್ಥಿತರಿದ್ದರು.