image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದಿಂದ ಸ್ಥಳೀಯ ಸಂಸ್ಥೆಗಳು ದಿವಾಳಿ:ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ಪಾದಯಾತ್ರೆಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದಿಂದ ಸ್ಥಳೀಯ ಸಂಸ್ಥೆಗಳು ದಿವಾಳಿ:ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ಪಾದಯಾತ್ರೆಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ವಾಗ್ದಾಳಿ

ಮಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು, ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡದೆ ಬಡವರು, ತಾಯಂದಿರು ಮತ್ತು ಯುವಕರ ಶಾಪ ಕಟ್ಟಿಕೊಳ್ಳುತ್ತಿದೆ ಎಂದು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರು ಮಹಾಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೀರಿ ಜಂಕ್ಷನ್‌ನಿಂದ ಕೋಟೆಕಾರುವರೆಗೆ ಹಮ್ಮಿಕೊಳ್ಳಲಾಗಿದ್ದ "ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ – ನಮ್ಮ ಹಕ್ಕು ನಮಗೆ ನೀಡಿ" ಬೃಹತ್ ಪಾದಯಾತ್ರೆ ಹಾಗೂ ಹಕ್ಕೊತ್ತಾಯ ಪ್ರತಿಭಟನಾ ಸಭೆಯಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ತಾವು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 96ಕ್ಕೂ ಹೆಚ್ಚು ಪಂಚಾಯಿತಿಗಳಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಸರ್ಕಾರ ಬಂದ ನಂತರ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಅವರು ಆರೋಪಿಸಿದರು. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಡಾ. ಬಿ.ಆರ್. ಅಂಬೇಡ್ಕರ್ ಆವಾಸ್ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆಯಡಿ ಪ್ರತಿಯೊಂದು ಪಂಚಾಯಿತಿಗೂ ನೂರಾರು ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ಈ ಸರ್ಕಾರ ಬಂದ ಮೇಲೆ ಬಡವರಿಗೆ ಒಂದೇ ಒಂದು ಮನೆಯನ್ನು ನೀಡಿಲ್ಲ. ಇನ್ನೊಂದೆಡೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಲ್.ಬಿ.ಪಾಸ್ (LBPAS) ತಂತ್ರಾಂಶದ ಲೋಪದಿಂದಾಗಿ ಸಾಮಾನ್ಯ ನಾಗರಿಕರು ಹಾಗೂ ಬಿಲ್ಡರ್‌ಗಳು ತಮ್ಮ ಸ್ವಂತ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಕಟ್ಟಡ ಪರವಾನಗಿಗಾಗಿ ತಿಂಗಳುಗಟ್ಟಲೆ ಕಚೇರಿಯಿಂದ ಕಚೇರಿಗೆ ಅಲೆಯುವಂತಾಗಿದೆ ಎಂದು ಕಿಡಿಕಾರಿದರು.

ಬೆಳಗಿನ ಜಾವ ನಾಲ್ಕು ಗಂಟೆಗೆ ಎದ್ದು ಊರು, ಪರಿಸರವನ್ನು ಸ್ವಚ್ಛಗೊಳಿಸುವ ಪಟ್ಟಣ ಪಂಚಾಯಿತಿಯ ಸ್ವಚ್ಛತಾಗಾರರು ಮತ್ತು ಹೊರಗುತ್ತಿಗೆ ಕಾರ್ಮಿಕರ ಹೊಟ್ಟೆಗೂ ಈ ಸರ್ಕಾರ ಕಲ್ಲು ಹಾಕಿದೆ ಎಂದು ದೂರಿದ ಅವರು, ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ಕನಿಷ್ಠ ಪರಿಷ್ಕೃತ ವೇತನ ಹೆಚ್ಚಿಸಿ ಆದೇಶ ಹೊರಡಿಸಿದ್ದರೆ, ಅದೇ ಸರ್ಕಾರದ ಹಣಕಾಸು ಇಲಾಖೆ ಅದಕ್ಕೆ ತಡೆ ನೀಡಿ ವಂಚಿಸಿತ್ತು ಎಂದರು. ಈ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಸರ್ಕಾರಕ್ಕೆ ತೀವ್ರ ಚೀಮಾರಿ ಹಾಕುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಇತ್ತ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳನ್ನು ವಿತರಿಸದೆ ಬಡವರ ಅನ್ನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವೇಕ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ನೂರಾರು ಕೊಠಡಿಗಳನ್ನು ನಿರ್ಮಿಸಿದ್ದರೆ, ಇಂದು ಸರ್ಕಾರಿ ಶಾಲೆಗಳು ಮತ್ತು ಪಂಚಾಯಿತಿ ಕಟ್ಟಡಗಳಿಗೆ ಟರ್ಪಾಲ್ ಹಾಕುವ ದುಃಸ್ಥಿತಿ ಬಂದಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

ಯಡಿಯೂರಪ್ಪನವರು ಹಾಗೂ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ವಿಧವಾ ತಾಯಂದಿರು, ವೃದ್ಧರು ಹಾಗೂ ಅಂಗವಿಕಲರಿಗೆ ನಿರಂತರವಾಗಿ ಮಾಸಾಶನ ನೀಡುವ ಮೂಲಕ ಸರ್ಕಾರ ಆಸರೆಯಾಗಿತ್ತು. ಆದರೆ ಈ ಸರ್ಕಾರ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ಪಿಂಚಣಿಯನ್ನು ನಿಲ್ಲಿಸಿ ಹಿರಿಯ ಜೀವಗಳ ಶಾಪ ಕಟ್ಟಿಕೊಂಡಿದೆ ಎಂದು ಟೀಕಿಸಿದರು. ವಿಧಾನ ಪರಿಷತ್ತಿನಲ್ಲಿ ತಾವು ಪ್ರಶ್ನಿಸಿದಾಗ ರಾಜ್ಯದ 42 ಇಲಾಖೆಗಳಲ್ಲಿ ಬರೋಬ್ಬರಿ 2,88,481 ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಇದರಲ್ಲಿ 76,000 ಶಿಕ್ಷಕರ ಹುದ್ದೆಗಳು ಹಾಗೂ 1,000ಕ್ಕೂ ಹೆಚ್ಚು ಪಿಡಿಒ ಹುದ್ದೆಗಳು ಖಾಲಿ ಬಿದ್ದಿವೆ. 2024ರಲ್ಲಿ 250 ಪಿಡಿಒ ಹುದ್ದೆಗಳಿಗೆ ಕೆಪಿಎಸ್‌ಸಿ ಮೂಲಕ ಅರ್ಜಿ ಕರೆದರೂ ಇಂದಿಗೂ ಫಲಿತಾಂಶ ಪ್ರಕಟಿಸದೆ ಯುವಜನತೆಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿದರು.

ಇಂದು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ, ಸ್ವಚ್ಛ ಭಾರತ್ ಮಿಷನ್, ಅಮೃತ್ ಯೋಜನೆ ಹಾಗೂ ಜಲಜೀವನ್ ಮಿಷನ್ ಅನುದಾನದಿಂದ ಮಾತ್ರ ಎಂದು ಹೇಳಿದ ಕಿಶೋರ್ ಕುಮಾರ್, 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಹಿರಿಯ ನಾಗರಿಕರಿಗೂ ಯಾವುದೇ ಆರ್ಥಿಕ ಮಾನದಂಡವಿಲ್ಲದೆ ₹5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುವ ಪ್ರಧಾನ ಮಂತ್ರಿ ವಯೋವಂದನಾ ಯೋಜನೆಯನ್ನು ಸಹ ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೊಳಿಸದೆ ಬಡವರಿಗೆ ವಂಚಿಸಲಾಗುತ್ತಿದೆ ಎಂದರು. ಜನವಿರೋಧಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಬಿಜೆಪಿಯ ಈ ಹಕ್ಕೊತ್ತಾಯ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ್ ತೊಕ್ಕೊಟ್ಟು, ಕೆ. ಮೋಹನ್ ರಾಜ್, ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ