image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅಪಾರ: ಪದ್ಮರಾಜ್ ಆರ್. ಪೂಜಾರಿ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅಪಾರ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು : ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮಹತ್ವಾಕಾಂಕ್ಷೆಯ ಸುಧಾರಣಾ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ ಕೊಡುಗೆ ಅಪಾರವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 137ನೇ ಜನ್ಮ ದಿನಾಚರಣೆಯ ಅಂಗವಾಗಿ ಶನಿವಾರ (ನ. 14) ಮಂಗಳೂರು ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಸ್ವಾತಂತ್ರ್ಯೋತ್ತರ ಭಾರತದ ಸರ್ವತೋಮುಖ ಅಭಿವೃದ್ಧಿಗಾಗಿ ನೆಹರೂ ಅವರು ಯೋಜನಾ ಆಯೋಗವನ್ನು ಸ್ಥಾಪಿಸಿ, ಪಂಚವಾರ್ಷಿಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರು. ದೇಶವನ್ನು ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆಗಳು, ಉಕ್ಕಿನ ಕಾರ್ಖಾನೆಗಳು ಹಾಗೂ ಕೃಷಿ ಕ್ಷೇತ್ರಕ್ಕೆ ಪೂರಕವಾಗಿ ಅಣೆಕಟ್ಟುಗಳ ನಿರ್ಮಾಣಕ್ಕೆ ಒತ್ತು ನೀಡಿದರು. ಅಲ್ಲದೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆಗಾಗಿ ವೈದ್ಯಕೀಯ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ವಿಶೇಷ ಆದ್ಯತೆ ನೀಡಿದ್ದರು ಎಂದು ಸ್ಮರಿಸಿದರು.

ಇಂದು ದೇಶದ ಹೆಮ್ಮೆಯಾಗಿರುವ ಬಹುತೇಕ ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಮತ್ತು ಉನ್ನತ ಸಂಶೋಧನಾ ಸಂಸ್ಥೆಗಳು ಭಾರತ ಸ್ವಾತಂತ್ರ್ಯ ಗಳಿಸಿದ ಮೊದಲ 15 ವರ್ಷಗಳ ಅವಧಿಯಲ್ಲೇ ನಿರ್ಮಾಣಗೊಂಡಿವೆ. ನೆಹರೂ ಅವರ ದೂರದೃಷ್ಟಿಯ ಯೋಜನೆಗಳ ಫಲವನ್ನು ಇಂದಿನ ಪೀಳಿಗೆ ಮಾತ್ರವಲ್ಲದೆ, ಮುಂದಿನ ಪೀಳಿಗೆಯೂ ಅನುಭವಿಸಲಿದೆ ಎಂದು ಅವರು ಪ್ರತಿಪಾದಿಸಿದರು. ಆದರೆ, ದೇಶ ಕಟ್ಟುವಲ್ಲಿ ಇಷ್ಟೆಲ್ಲಾ ಮಹತ್ತರ ಪಾತ್ರ ವಹಿಸಿದ ನೆಹರೂ ಹಾಗೂ ಅವರ ಕುಟುಂಬದ ನಿಸ್ವಾರ್ಥ ಕೊಡುಗೆ ಮತ್ತು ದೇಶದ ನೈಜ ಇತಿಹಾಸವನ್ನು ಇಂದು ಉದ್ದೇಶಪೂರ್ವಕವಾಗಿ ಮರೆಮಾಚುವ ಕೆಲಸ ನಡೆಯುತ್ತಿದೆ ಎಂದು ಪದ್ಮರಾಜ್ ಆರ್. ಪೂಜಾರಿ ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೊ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದ್ದರು.
ಅಲ್ಲದೆ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪ್ರಕಾಶ್ ಸಾಲ್ಯಾನ್, ಜೆ. ಅಬ್ದುಲ್ ಸಲೀಂ, ನಾಗೇಶ್ ಗೌಡ ಬೆಳ್ತಂಗಡಿ, ಮೋಹನ್ ಕೋಟ್ಯಾನ್, ಸತೀಶ್ ಕಾಶಿಪಟ್ಣ, ಯು.ಟಿ. ತೌಸೀಫ್ ಉಪ್ಪಿನಂಗಡಿ ಹಾಗೂ ಪಕ್ಷದ ಮುಖಂಡರಾದ ಲ್ಯಾನ್ಸಿಲೋಟೊ ಪಿಂಟೋ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಟಿ.ಕೆ. ಸುಧೀರ್, ಇಬ್ರಾಹೀಂ ನವಾಝ್, ದಿನೇಶ್ ಮುಳೂರು, ಮಲಾರ್ ಮೋನು ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಅವರು ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಸ್ವಾಗತಿಸಿದರು.

Category
ಕರಾವಳಿ ತರಂಗಿಣಿ