ಮಂಗಳೂರು: ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಹಾಗೂ ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುವ ಇಂತಹ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಕಿಡಿಕಾರಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪದ್ಮರಾಜ್ ಆರ್. ಪೂಜಾರಿ ಅವರು, ಶಾಲೆಗಳು ಮಕ್ಕಳಿಗೆ ಜ್ಞಾನ, ಸಂಸ್ಕಾರ ನೀಡಿ ಅವರ ಉಜ್ವಲ ಭವಿಷ್ಯವನ್ನು ರೂಪಿಸುವ ಪವಿತ್ರ ದೇಗುಲಗಳಾಗಿವೆ. ಆದರೆ, ಪೂಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ವೇದಿಕೆಯಲ್ಲಿ ಶಾಸಕರು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಮತ್ತು ರಾಜಕೀಯದ ಅರಿವೇ ಇಲ್ಲದ ಮುಗ್ಧ ಶಾಲಾ ಮಕ್ಕಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡಿರುವುದು ಶಿಕ್ಷಣ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವಾದದ ಹಿನ್ನೆಲೆಯನ್ನು ವಿವರಿಸಿರುವ ಅವರು, ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ನೂತನ ಸಭಾಭವನದ ಉದ್ಘಾಟನೆಗೆ ಸರ್ಕಾರದ ಅನುಮತಿ ಹಾಗೂ ಶಿಷ್ಟಾಚಾರವನ್ನು ಉಲ್ಲಂಘಿಸಿ ಮುಂದಾಗಿದ್ದನ್ನು ಪ್ರಶ್ನಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ದೂರು ನೀಡಲಾಗಿತ್ತು. ಶಿಕ್ಷಣ ಇಲಾಖೆಯ ಆಕ್ಷೇಪದ ಹಿನ್ನೆಲೆಯಲ್ಲಿ ಆ ಉದ್ಘಾಟನಾ ಕಾರ್ಯಕ್ರಮ ರದ್ದಾಗಿತ್ತು. ಆದರೆ, ಕಾರ್ಯಕ್ರಮ ರದ್ದಾದ ಹತಾಶೆಯಿಂದ ಖಾಸಗಿ ಸಂಸ್ಥೆಯೊಂದಕ್ಕೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ಭಾಷಣ ಮಾಡಲಾಗಿದೆ. ಅಲ್ಲದೆ, ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜಕೀಯ ನಾಯಕರ ಪರವಾಗಿ ಜಯಕಾರ ಹಾಕಿಸಿರುವುದು ಶಿಕ್ಷಣ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಶಾಸಕರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯ ಹಾಗೂ ಶಿಕ್ಷಣ ಪ್ರೇಮಿಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಶೈಕ್ಷಣಿಕ ಸಂಸ್ಥೆಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಇಂತಹ ಬೆಳವಣಿಗೆಗಳನ್ನು ನಾಗರಿಕ ಸಮಾಜ ಎಂದಿಗೂ ಸಹಿಸುವುದಿಲ್ಲ. ಎಳೆಯ ಮಕ್ಕಳ ಮನಸ್ಸಿನಲ್ಲಿ ರಾಜಕೀಯ ವಿಷಬೀಜ ಬಿತ್ತುವ ಇಂತಹ ಅಪಾಯಕಾರಿ ಪ್ರವೃತ್ತಿಯ ವಿರುದ್ಧ ಶಿಕ್ಷಣ ಇಲಾಖೆಯು ತಕ್ಷಣವೇ ಎಚ್ಚೆತ್ತುಕೊಂಡು, ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದ್ಮರಾಜ್ ಆರ್. ಪೂಜಾರಿ ಅವರು ಆಗ್ರಹಿಸಿದ್ದಾರೆ.