image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ: ತಳಮಟ್ಟದಿಂದ ಪಕ್ಷ ಕಟ್ಟಲು ಸಚಿವ ಲಕ್ಷ್ಮಣ ಸವದಿ ಕರೆ

ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ: ತಳಮಟ್ಟದಿಂದ ಪಕ್ಷ ಕಟ್ಟಲು ಸಚಿವ ಲಕ್ಷ್ಮಣ ಸವದಿ ಕರೆ

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಲು ಸಾಧ್ಯವಿದೆ. ಆದ್ದರಿಂದ ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದ್ದಾರೆ.

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ ಎಂದು ಬಣ್ಣಿಸಿದರು. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದು ಭರವಸೆ ನೀಡಿದರು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ತಾವು ಸಂಪೂರ್ಣ ಬದ್ಧರಾಗಿರುವುದಾಗಿ ತಿಳಿಸಿದರು.

ಹಿಂದಿನ ಅವಧಿಯ ಕೃಷಿ ಸಾಲ ಯೋಜನೆಗಳನ್ನು ನೆನಪಿಸಿಕೊಂಡ ಸವದಿ, 2008ರಲ್ಲಿ ತಾವು ಸಹಕಾರ ಸಚಿವರಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದಾಗಿ ಹೇಳಿದರು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.

ಕಾಂಗ್ರೆಸ್ ಪಕ್ಷಕ್ಕೆ 'ಹಸ್ತದ ಚಿಹ್ನೆ' ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸಚಿವರು, ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ತಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು ಎಂದು ವಿವರಿಸಿದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ 'ಜೈನ ಅಭಿವೃದ್ಧಿ ನಿಗಮ' ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಲಕ್ಷ್ಮಣ ಸವದಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ ಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ ಸೇರಿದಂತೆ ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ