ಹಿರಿಯೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, ಬರ ನಿರ್ವಹಣೆ ವೈಫಲ್ಯ ಮತ್ತು ಜನವಿರೋಧಿ ನೀತಿಗಳಿಗೆ ಹಿರಿಯೂರು ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಹೇಳಿದರು. ಹಿರಿಯೂರು ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಿಂದ ತಕ್ಷಣ ಸರ್ಕಾರ ಬದಲಾಗದಿದ್ದರೂ, ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜನರ ಆಕ್ರೋಶವನ್ನು ಹೊರಹಾಕಲು ಇದು ಸೂಕ್ತ ವೇದಿಕೆಯಾಗಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜನನ-ಮರಣ ಪ್ರಮಾಣಪತ್ರ, ಪಹಣಿ, ಬಾಂಡ್ ಪೇಪರ್ ಸೇರಿದಂತೆ ಹಾಲು, ಅಡುಗೆ ಎಣ್ಣೆಯಂತಹ ಅಗತ್ಯ ವಸ್ತುಗಳ ದರ ವಿಪರೀತ ಏರಿಕೆಯಾಗಿದೆ. ಒಂದು ಕೈಯಲ್ಲಿ ಉಚಿತ ಯೋಜನೆಗಳನ್ನು ನೀಡಿ, ಮತ್ತೊಂದು ಕೈಯಲ್ಲಿ ಜನರಿಂದಲೇ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಅಲ್ಲದೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನೇ ರಾಜ್ಯ ಸರ್ಕಾರ ತನ್ನದೆಂದು ಬಿಂಬಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ 200ಕ್ಕೂ ಹೆಚ್ಚು ಬರಪೀಡಿತ ತಾಲೂಕುಗಳಲ್ಲಿ ಸಮರ್ಪಕ ಪರಿಹಾರ ಕಾಮಗಾರಿ ನಡೆಸದ ಸರ್ಕಾರ, ಕಬ್ಬು ಬೆಳೆಗಾರರಿಗೆ ಪರಿಹಾರ ನೀಡುವ ವಿಚಾರದಲ್ಲಿ ಖಜಾನೆ ಖಾಲಿಯಾಗಿದೆ ಎನ್ನುತ್ತಿದೆ. ಆದರೆ ಅಧಿಕಾರದಲ್ಲಿರುವವರ ಖಜಾನೆ ಮಾತ್ರ ತುಂಬುತ್ತಿದೆ ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಎಸ್‌ಸಿ/ಎಸ್‌ಟಿ ಮೀಸಲಾತಿ, ಒಳಮೀಸಲಾತಿ ಅನ್ಯಾಯ ಹಾಗೂ ವಾಲ್ಮೀಕಿ ನಿಗಮದ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕುರಿತು ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯಂತೆಯೇ ಹಿರಿಯೂರಿನಲ್ಲೂ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲಿವೆ. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವ ಹಾಗೂ ಹಿರಿಯ ನಾಯಕ ತಿಪ್ಪಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಇಡೀ ತಂಡ ಕ್ಷೇತ್ರದಲ್ಲಿ ಸಂಘಟಿತವಾಗಿ ಶ್ರಮಿಸಲಿದೆ. ಇದು ಲೂಟಿ ಹೊಡೆದವರ ಹಣಬಲ ಮತ್ತು ಹಿರಿಯೂರು ಮತದಾರರ ಸ್ವಾಭಿಮಾನದ ನಡುವಿನ ಹೋರಾಟವಾಗಿದ್ದು, ಎನ್‌ಡಿಎ ಗೆಲುವಿನ ಮೂಲಕ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಹಿರಿಯ ನಾಯಕ ತಿಪ್ಪಾರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಮುಖಂಡ ಅಭಿನಂದನ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.