ಚಿಕ್ಕಮಗಳೂರು: ಮುಂಬರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರ್ಯಕರ್ತರು ಈಗಿನಿಂದಲೇ ಸಂಘಟನಾತ್ಮಕವಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಕರೆ ನೀಡಿದ್ದಾರೆ.
ಲಕ್ಯಾ ಮಹಾಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಿಂತ ಸಿದ್ಧಾಂತ ಮತ್ತು ನಿಷ್ಠೆಗಾಗಿ ನಿಲ್ಲುವ ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸಿದ ಡಾ. ರವಿ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಜನನ-ಮರಣ ಪ್ರಮಾಣಪತ್ರ ಹಾಗೂ ಸ್ಟಾಂಪ್ ಪೇಪರ್ ಶುಲ್ಕ ಹೆಚ್ಚಳ, ಪಿಂಚಣಿ ಮತ್ತು ನೌಕರರ ವೇತನ ವಿಳಂಬದ ಕುರಿತು ಗ್ರಾಮಮಟ್ಟದಲ್ಲಿ ಜನಜಾಗೃತಿ ಮೂಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಭದ್ರಾ ನದಿ ನೀರು ತುಂಬಿಸುವ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಂತಹ ಕಾಮಗಾರಿಗಳನ್ನೇ ಈಗಿನ ಸರ್ಕಾರ ತಮ್ಮ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಅವರು ಆರೋಪಿಸಿದರು. 2018-23ರ ಅವಧಿಯಲ್ಲಿ ಲಕ್ಯಾ ಹೋಬಳಿಗೆ ₹294.10 ಕೋಟಿ ಅನುದಾನ ಮಂಜೂರು ಮಾಡಿಸಲಾಗಿತ್ತು ಎಂದು ತಿಳಿಸಿದ ಅವರು, ಪ್ರಸ್ತುತ ಸರ್ಕಾರದ ಅನುದಾನದ ಲೆಕ್ಕವನ್ನೂ ಜನರು ಕೇಳಬೇಕು ಎಂದರು.
ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸ್ಥಳೀಯ ಮಟ್ಟದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಹಾಗೂ ಪ್ರತಿ ಬೂತ್ನಲ್ಲಿ ಮಹಿಳೆಯರು ಮತ್ತು ಯುವಕರಿಗೆ ಜವಾಬ್ದಾರಿ ನೀಡಿ ಪಕ್ಷವನ್ನು ಬಲಪಡಿಸಬೇಕು ಎಂದು ಅವರು ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಈಶ್ವರಳ್ಳಿ ಮಹೇಶ್, ಬೀಕನಹಳ್ಳಿ ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ಲಕ್ಯಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಎಸ್. ಸದಾಶಿವ, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.