ಬೀದರ್: "ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಇದಕ್ಕೆ ಈ ಕಾರ್ಯಕ್ರಮವೇ ಉದಾಹರಣೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ್ಕೆ ಮುಕುಟವಾಗಿರುವ ಬೀದರ್ ಜಿಲ್ಲೆಯಲ್ಲಿ 2025 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
"ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಜೊತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಪ್ರತಿಪಕ್ಷಗಳ ಟೀಕೆಗಳ ಹೊರತಾಗಿಯೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗಿದೆ. ಪ್ರತಿ ವರ್ಷ 52 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ರಾಜ್ಯವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸಮತೋಲನದ ಹಾದಿಯಲ್ಲಿ ಮುನ್ನಡೆಸುವ ಕಾಳಜಿಯುಳ್ಳ ಬೃಹತ್ ಮೊತ್ತದ ಬಜೆಟ್ ಅನ್ನು ಈ ವರ್ಷ ಮಂಡಿಸಲಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ಒಟ್ಟು 4.9 ಲಕ್ಷ ಕೋಟಿ ಮೊತ್ತದ ಬಜೆಟ್‌ನ್ನು ಮಂಡಿಸಲಾಗಿದೆ. ಕಳೆದ ವರ್ಷ ಕ್ಯಾಪಿಟಲ್ ಖರ್ಚು ಮಾಡಿದ್ದು 26 ಸಾವಿರ ಕೋಟಿ, ಈ ವರ್ಷ 83 ಸಾವಿರ ಕೋಟಿ. ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಒಂದಲ್ಲ ಒಂದು ರೀತಿಯ ಬದಲಾವಣೆ, ಸುಧಾರಣೆ ತಂದಿರುವುದಲ್ಲದೆ ಆರ್ಥಿಕ ಸಂಚಲನವನ್ನು ಸಹ ದೊಡ್ಡ ಮಟ್ಟದಲ್ಲಿ ಸೃಷ್ಟಿಸಿದೆ. ಜಿಎಸ್ಟಿ ಸಂಗ್ರಹದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ" ಎಂದರು.