ಮಂಗಳೂರು: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 26ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ, ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಎಂ. ಜಾನ್ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ, ನವೀನ್ ಡಿ'ಸೋಜಾ, ಶುಭೋದಯ ಆಳ್ವ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ನೀರಜ್‌ಪಾಲ್, ಸುಹಾನ್ ಆಳ್ವ ಉಪಸ್ಥಿತರಿದ್ದರು.