ಮಡಿಕೇರಿ - ಜೀತ ಕಾರ್ಮಿಕ ಪದ್ಧತಿ ಎಂಬುದು ಒಂದು ಸಾಮಾಜಿಕ ಪಿಡುಗಾಗಿದ್ದು, ಅದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ‘ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೀತ ಪದ್ಧತಿ ಎಂಬ ಪಿಡುಗನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕು. ಈ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ಸ್ಪೆಷಲ್ ಟಾಸ್ಕ್ಫೋರ್ಸ್ ಸಹ ಆರಂಭಿಸಲಾಗಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ೧೪ ವಿವಿಧ ಇಲಾಖಾಧಿಕಾರಿಗಳು ಸಹ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಲುವಾಗಿ ಸ್ಪೆಷಲ್ ಟಾಸ್ಕ್ಫೋರ್ಸ್ ಮುಖಾಂತರ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.