image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿ ಭಾಗ ಕಡೆಗಣಿಸಿದ ಬಜೆಟ್‌ : ಸತೀಶ್ ಕುಂಪಲ ಟೀಕೆ

ಕರಾವಳಿ ಭಾಗ ಕಡೆಗಣಿಸಿದ ಬಜೆಟ್‌ : ಸತೀಶ್ ಕುಂಪಲ ಟೀಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕರಾವಳಿಯ ಜನರು ಇಟ್ಟಿದ್ದ ಭರವಸೆ ಹುಸಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಜೆಟ್‌ ₹4.48 ಲಕ್ಷ ಕೋಟಿ ಗಾತ್ರವಿದ್ದು, ಅದರಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹51,591 ಕೋಟಿ ಮೀಸಲಿರಿಸಲಾಗಿದೆ. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲವಾಗಿದ್ದು, ಅದನ್ನು ಸರಿದೂಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರಯತ್ನಿಸಿದ್ದಾರೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಾಗಿರುವ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ನಿಧಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ. ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ಘೋಷಿಸುವ ಮೂಲಕ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಅವರು ದೂರಿದರು.
ಮತ ಬ್ಯಾಂಕ್‌ ರಾಜಕೀಯಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಹಲವು ಸೌಲಭ್ಯಗಳನ್ನು ಘೋಷಿಸಲಾಗಿದೆ. ಮೌಲಾನಾ ಆಜಾದ್ ಶಾಲೆಗಳಿಗೆ ಸುಮಾರು ₹600 ಕೋಟಿ, ಉರ್ದು ಶಾಲೆಗಳಿಗೆ ₹400 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೆ ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಉದ್ಯೋಗ ಕೈಗೊಳ್ಳಲು ಶೇ.75 ಸಬ್ಸಿಡಿಯಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಘೋಷಿಸಲಾಗಿದೆ. ಇದು ಮುಸ್ಲಿಂ ಸಮುದಾಯವನ್ನು ಓಲೈಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಬಜೆಟ್‌ನಲ್ಲಿ ದೊಡ್ಡ ಮಟ್ಟದ ಉದ್ಯೋಗ ಸೃಷ್ಟಿ, ಕೈಗಾರಿಕೆ ಹೂಡಿಕೆ, ರೈತರ ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸ್ಪಷ್ಟವಾದ ದಿಕ್ಕು ಕಾಣುತ್ತಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಮತ್ತೊಮ್ಮೆ ನಿರ್ಲಕ್ಷಿಸಲಾಗಿದ್ದು, ಹಿಂದುಳಿದ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಅಭಿವೃದ್ಧಿಗಾಗಿ ಅಗತ್ಯವಾದ ವಿಶೇಷ ಪ್ಯಾಕೇಜ್ ಘೋಷಿಸಲಾಗಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಒಣಪ್ರತಿಷ್ಠೆಗಾಗಿ ಬಜೆಟ್‌ನಲ್ಲಿ ಸುಮಾರು ₹8 ಲಕ್ಷ ಕೋಟಿಯಷ್ಟು ಸಾಲ ಮಾಡಿದ್ದಾರೆ. ವಾರ್ಷಿಕ ಆಯವ್ಯಯದ ಶೇ.20 ರಷ್ಟು ಹಣ ಸಾಲದ ಬಡ್ಡಿ ಪಾವತಿಗೆ ಹೋಗುವ ಆತಂಕವಿದ್ದು, ಇದರಿಂದ ರಾಜ್ಯದ ಆರ್ಥಿಕತೆ ಹಳಿ ತಪ್ಪುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಬಿಜೆಪಿ ಮುಖಂಡರಾದ ರವಿಶಂಕರ್ ಮುಜಾರು, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವರ್, ವಸಂತ ಜೆ. ಪೂಜಾರಿ, ಮಂಜುಳಾ ರಾವ್, ಅರುಣ್ ಶೆಟ್ ಹಾಗೂ ನಂದನ್ ಮಲ್ಯ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ