ಬೆಂಗಳೂರು: ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಗಮನ ಸೆಳೆಯುವ ಬೆಳವಣಿಗೆಯೊಂದರಲ್ಲಿ, ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ (ಸ) ಪಕ್ಷದ ಹಳೆಯ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಯೋಗಿಶ್ ಶೆಟ್ಟಿ ಜಪ್ಪು ಅವರು ಮತ್ತೆ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರು ನಗರದ ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವಗೌಡ ಆಶೀರ್ವಾದದೊಂದಿಗೆ ಇಬ್ಬರೂ ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ ಶಾಲು ಹೊದಿಸಿ ಹೂಮಾಲೆ ಹಾಕಿ ಇಬ್ಬರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ವಕ್ತಾರ ಎಂ.ಬಿ. ಸದಾಶಿವ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ, ಮಾಜಿ ಶಾಸಕ ಸೇರಿದಂತೆ ವಸಂತ ಪೂಜಾರಿ, ಇಕ್ಬಲ್ ಮುಲ್ಕಿ, ರತ್ನಾಕರ್ ಸುವರ್ಣ, ಶಾ ಝಮೀರ್, ಮೀರಾ ಸಾಹೇಬ್, ದೇವಿಪ್ರಸಾದ್ ಕೊಕ್ಕಡ, ಮಂಜುನಾಥ್ ಸುಳ್ಯ ಹಾಗೂ ಪವನ್ ಯು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ಜನತಾದಳದ ಮೂಲ ತತ್ವಗಳಾದ ಸಾಮಾಜಿಕ ನ್ಯಾಯ, ರೈತರ ಪರ ಹೋರಾಟ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ರಕ್ಷಣೆಯೇ ತಮ್ಮ ರಾಜಕೀಯ ಧ್ಯೇಯವಾಗಿದ್ದು, ಅದೇ ದಾರಿಯಲ್ಲಿ ಮುಂದುವರೆಯುವುದಾಗಿ ತಿಳಿಸಿದರು.
ಶಶಿರಾಜ್ ಶೆಟ್ಟಿ ಕೊಳಂಬೆ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಗ್ರಾಮೀಣ ಮಟ್ಟದಿಂದ ಮತ್ತಷ್ಟು ಬಲಪಡಿಸುವ ಕೆಲಸಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು. ಯುವಕರನ್ನು ರಾಜಕೀಯ ಪ್ರಕ್ರಿಯೆಯಲ್ಲಿ ಭಾಗಿಯಾಗಿಸುವುದು ಮತ್ತು ಜನಸಮಸ್ಯೆಗಳಿಗೆ ಸ್ಪಂದಿಸುವ ಸಂಘಟನೆಯನ್ನು ನಿರ್ಮಿಸುವುದು ತಮ್ಮ ಗುರಿಯಾಗಿದೆ ಎಂದರು.
ಯೋಗಿಶ್ ಶೆಟ್ಟಿ ಜಪ್ಪು ಅವರು ವಿದ್ಯಾರ್ಥಿ ರಾಜಕಾರಣದಲ್ಲಿ ಪಡೆದ ಅನುಭವವನ್ನು ಮುಂದಿನ ರಾಜಕೀಯ ಪಯಣದಲ್ಲಿ ಬಳಸಿಕೊಳ್ಳುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳ ಮಟ್ಟದಲ್ಲಿಯೂ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶವಿದೆ ಎಂದು ಹೇಳಿದರು