ಮಂಗಳೂರು: ಕಲಬುರುಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ, ಭಕ್ತರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಕಾಂಗ್ರೆಸ್ಸಿನ 'ಬ್ರದರ್ಸ್'ಗಳು ಅಮಾಯಕರಲ್ಲ. ಅವರ ಮೇಲಿನ ಪ್ರಕರಣವನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳಬಾರದು ಮತ್ತು ಅವರಿಗೆ ಕಾನೂನಿನ ಅಡಿ ತಕ್ಕ ಶಿಕ್ಷೆಯಾಗಲೇಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಇಂತಹ ಗಂಭೀರ ಕೃತ್ಯ ಎಸಗಿರುವ ಆರೋಪಿಗಳ ಮೇಲಿನ ಮೊಕದ್ದಮೆಗಳನ್ನು ಕೈಬಿಡುವಂತೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರೇ ಸ್ವತಃ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ ಮಾತ್ರವಲ್ಲ, ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇವಲ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನಿರಂತರವಾಗಿ ಕಡೆಗಣಿಸುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಸಣ್ಣಪುಟ್ಟ ವಿಚಾರಗಳಿಗೂ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ರೌಡಿ ಶೀಟ್ ತೆರೆಯಲಾಗುತ್ತಿದೆ. ಆದರೆ, ಮತ್ತೊಂದೆಡೆ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದು, ಅವರು ಮತ್ತಷ್ಟು ದುಷ್ಕೃತ್ಯ ಎಸಗಲು ಸರ್ಕಾರವೇ ಪ್ರೇರಣೆ ನೀಡುತ್ತಿದೆ. ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಸಮಾಜಘಾತುಕ ಶಕ್ತಿಗಳಿಗೆ ಬೆಂಬಲ ನೀಡುತ್ತಿರುವುದು ಸರಿಯಲ್ಲ. ನಾಡಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕೂಡಲೇ ತನ್ನ ಅವಿವೇಕದ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಡಕ್ಕಾಗಿ ಒತ್ತಾಯಿಸಿದ್ದಾರೆ.