image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿದೆ: ಅರವಿಂದ್ ಬೆಲ್ಲದ್ ತೀವ್ರ ಆಕ್ರೋಶ

ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿದೆ: ಅರವಿಂದ್ ಬೆಲ್ಲದ್ ತೀವ್ರ ಆಕ್ರೋಶ

ಧಾರವಾಡ : ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಉತ್ತಮ ಅವಕಾಶ ಸಿಕ್ಕಿದ್ದು, ಅವರ ನೇತೃತ್ವದಲ್ಲಾದರೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಅರವಿಂದ್ ಬೆಲ್ಲದ್, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಜನತೆ ಕಾಂಗ್ರೆಸ್‌ಗೆ 136 ಸೀಟುಗಳನ್ನು ನೀಡಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತಂದರು. ಈ ಸರ್ಕಾರ ಬಂದರೆ ರಾಜ್ಯ ಸುಭಿಕ್ಷೆಯಾಗಲಿದೆ, ಪ್ರಗತಿ ಕಾಣಲಿದೆ ಎಂದು ಜನ ಕಾಯುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ನಿರತವಾಗಿದೆ. ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ನಡೆಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಕುರಿತು ಮಾತನಾಡಿದ ಬೆಲ್ಲದ್, ಡಿಕೆಶಿ ಅವರಿಗೆ ಈಗ ಒಂದು ಮಹತ್ವದ ಅವಕಾಶ ಸಿಕ್ಕಿದೆ. ಅದನ್ನು ಅವರು ಸರಿಯಾಗಿ ಬಳಸಿಕೊಳ್ಳಬೇಕು. ಕಾಂಗ್ರೆಸ್‌ಗೆ 136 ಸ್ಥಾನಗಳು ಬರಲು ಕೇವಲ ಒಂದು ಸಮುದಾಯದ ಮತಗಳು ಕಾರಣವಲ್ಲ, ರಾಜ್ಯದ ಎಲ್ಲಾ ವರ್ಗದ ಜನರೂ ವೋಟ್ ಹಾಕಿದ್ದಾರೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು. ಹೀಗಾಗಿ ಎಲ್ಲರನ್ನೂ ಸಮಾನವಾಗಿ ಕಾಣುವ ಕೆಲಸ ಆಗಬೇಕಿದೆ. ಸದ್ಯ ಹದಗೆಟ್ಟಿರುವ ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಹಳಿಗೆ ತರಲು ಡಿ.ಕೆ. ಶಿವಕುಮಾರ್ ಅವರು ತಮ್ಮ ರಾಜಕೀಯ ಚಾಕಚಕ್ಯತೆಯನ್ನು ಬಳಸಬೇಕಾದ ಅಗತ್ಯವಿದೆ ಎಂದು ಪ್ರಮುಖ ಸಲಹೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ