ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕವನ್ನು ಘೋಷಿಸಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಪಕ್ಷದ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಡಿ.ಕೆ. ಶಿವಕುಮಾರ್ ಅವರ ಕೊಡುಗೆಯನ್ನು ಪಕ್ಷವು ಈ ಸಂದರ್ಭದಲ್ಲಿ ಶ್ಲಾಘಿಸಿದೆ.
ಬಿ.ಕೆ. ಹರಿಪ್ರಸಾದ್ ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ನಾಯಕರಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಗೆ ಹೆಚ್ಚು ಸನಿಹ ಇರುವ ನಾಯಕ ಕೂಡ. ಈ ಹಿಂದೆ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮುನ್ನಡೆಸಿದ ಮತ್ತು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಅನುಭವ, ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ನಿರೀಕ್ಷಿಸಲಾಗಿದೆ.