ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಮೂರು ಸದಸ್ಯರ ಸತ್ಯಶೋಧನಾ ಸಮಿತಿಯು ತನ್ನ ಆಂತರಿಕ ತನಿಖಾ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಲ್ಲಿಸಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಸೂಚನೆಯಂತೆ ತಮ್ಮ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರನ್ನೊಳಗೊಂಡ ಸಮಿತಿ ರಚನೆಯಾಗಿತ್ತು ಎಂದರು. ನಾಲ್ಕು ದಿನಗಳ ಅವಧಿಯಲ್ಲಿ ವರ್ಚುವಲ್ ಸಭೆ, ಶಂಕಿತರ ಪಟ್ಟಿ ಸಿದ್ಧತೆ, ಅಭ್ಯರ್ಥಿಗಳು, ಜೆಡಿಎಸ್ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಈ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗಿದೆ. ಇದು ಪಕ್ಷದ ಆಂತರಿಕ ತನಿಖೆಯಾಗಿರುವುದರಿಂದ ವರದಿಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದ ಅವರು, ಮುಂದಿನ ಕ್ರಮದ ಬಗ್ಗೆ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.