image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ನೀಟ್' ವಿವಾದ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ

'ನೀಟ್' ವಿವಾದ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ

ಬೆಂಗಳೂರು : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ 'ನೀಟ್' (NEET) ಪರೀಕ್ಷಾ ಅಕ್ರಮ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ತಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಿಂಬಿಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳ ಸ್ವಯಂಪ್ರೇರಿತ ಹೋರಾಟವನ್ನು ತನ್ನ ಸ್ವಾರ್ಥ ರಾಜಕೀಯಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕಾಂಗ್ರೆಸ್‌ನ ಗೆಲುವಲ್ಲ ಎಂದು ಸ್ಪಷ್ಟಪಡಿಸಿರುವ ವಿಜಯೇಂದ್ರ, ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದುರುಪಯೋಗಪಡಿಸಿಕೊಂಡು ಕೆಲ ಸಮಾಜಘಾತುಕ ಶಕ್ತಿಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವುದನ್ನು ಅರಿತು, ಪ್ರಧಾನ್ ಅವರು ನೈತಿಕ ಜವಾಬ್ದಾರಿ ಹೊತ್ತು ತಾವಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ. ಲಡಾಖ್‌ನಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವಾಗ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಸಹ ಇದೇ ಆತಂಕವನ್ನು ವ್ಯಕ್ತಪಡಿಸಿದ್ದರು ಎಂಬುದನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ವಿದೇಶದಲ್ಲಿದ್ದ ರಾಹುಲ್ ಗಾಂಧಿ ಅವರು ತಕ್ಷಣವೇ ಓಡಿಬಂದು ವಿದ್ಯಾರ್ಥಿಗಳ ಹಿತರಕ್ಷಣೆಗಿಂತ ಹೆಚ್ಚಾಗಿ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಈ ಪ್ರತಿಭಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳ ಹಾಗೂ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ದೇಶದ್ರೋಹದ ಆರೋಪ ಎದುರಿಸುತ್ತಿರುವ ಉಮರ್ ಖಾಲಿದ್ ಪರವಾಗಿ ಘೋಷಣೆ ಕೂಗುತ್ತಿರುವ ಮತ್ತು ಆತನ ಫೋಟೋ ಪ್ರದರ್ಶಿಸುತ್ತಿರುವ ಘಟನೆಯನ್ನು ಪ್ರಸ್ತಾಪಿಸಿದ ವಿಜಯೇಂದ್ರ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಏಕವಚನದಲ್ಲೇ ತೀವ್ರ ವಾಗ್ದಾಳಿ ನಡೆಸಿದರು. ರಾಜಧಾನಿಯಲ್ಲಿ ಪೊಲೀಸರ ವಿರುದ್ಧವೇ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗುತ್ತಿದ್ದರೂ ಗೃಹ ಸಚಿವರು ಮತ್ತು ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದರೂ ಇಂತಹ ಬೇಜವಾಬ್ದಾರಿ ನಾಯಕರು ಮೌನ ವಹಿಸಿರುವುದು ಖಂಡನೀಯ ಎಂದಿದ್ದಾರೆ.

Category
ಕರಾವಳಿ ತರಂಗಿಣಿ