image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭಾನುವಾರ ನಡೆಸಿದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲ ಹಾಗೂ ಎಡವಟ್ಟುಗಳ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್' (X) ಮೂಲಕ ವಾಗ್ದಾಳಿ ನಡೆಸಿರುವ ಅವರು, ವಿಜಯಪುರ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, OMR ಶೀಟ್‌ಗಳ ಗೊಂದಲ ಹಾಗೂ ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆಗಳು ಸರ್ಕಾರದ ಕ್ಷಮಿಸಲಾಗದ ನಿರ್ಲಕ್ಷ್ಯ ಮತ್ತು ಸಂಪೂರ್ಣ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ. ವರ್ಷಗಳಿಂದ ಶ್ರಮಪಟ್ಟು ಸಿದ್ಧತೆ ನಡೆಸಿದ್ದ ಸಾವಿರಾರು ಯುವಕರ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡಿದೆ. ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ಗೊಂದಲ ಉಂಟಾಗಿರುವ ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆಸಿ ತಪ್ಪಿತಸ್ಥರ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದ 884 ಕೇಂದ್ರಗಳಲ್ಲಿ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಡೆದ ಈ ಲಿಖಿತ ಪರೀಕ್ಷೆಗೆ 4,54,532 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಬಾರಿ ಪ್ರಥಮ ಬಾರಿಗೆ ಬೆಂಗಳೂರು ಸೇರಿ ಮೈಸೂರು, ದಾವಣಗೆರೆ, ವಿಜಯಪುರ, ರಾಯಚೂರು, ಕಲಬುರಗಿ ಹಾಗೂ ಹುಬ್ಬಳ್ಳಿಯಲ್ಲಿ ಒಎಂಆರ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಮುಖ ಚಹರೆ ಪತ್ತೆ ತಂತ್ರಜ್ಞಾನ, ಸಿಸಿಟಿವಿ ಕಣ್ಗಾವಲು, ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಬಿಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಪ್ರಾಧಿಕಾರ ತಿಳಿಸಿದ್ದರೂ, ಕೇಂದ್ರಗಳಲ್ಲಿ ಎಡವಟ್ಟುಗಳು ಮರುಕಳಿಸಿರುವುದು ಅಭ್ಯರ್ಥಿಗಳ ನಿರಾಸೆಗೆ ಕಾರಣವಾಗಿದೆ.

Category
ಕರಾವಳಿ ತರಂಗಿಣಿ