ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯ ಬೆನ್ನಲ್ಲೇ ಆಡಳಿತಾರೂಢ ಪಕ್ಷದಲ್ಲಿ ಭಿನ್ನಮತ ತೀವ್ರಗೊಂಡಿದೆ. ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಹಲವು ಹಿರಿಯ ಹಾಗೂ ನಿಷ್ಠಾವಂತ ಶಾಸಕರು ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಹಲವೆಡೆ ಶಾಸಕರ ಬೆಂಬಲಿಗರು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಶಾಸಕರು ಒಡ್ಡುತ್ತಿರುವ ಈ ರಾಜೀನಾಮೆ ಬೆದರಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಶಾಸಕರ ಬ್ಲಾಕ್‌ಮೇಲ್ ತಂತ್ರಕ್ಕೆ ಬಗ್ಗಬಾರದು ಎಂದು ನಿರ್ಧರಿಸಿರುವ ವರಿಷ್ಠರು, 'ಯಾರಾದರೂ ರಾಜೀನಾಮೆ ನೀಡಿದರೆ ತಕ್ಷಣವೇ ಸ್ವೀಕರಿಸಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ಬೇರೆ ಬೇರೆ ನಿಗಮ-ಮಂಡಳಿ ಅಥವಾ ಪ್ರಾಧಿಕಾರಗಳ ಹುದ್ದೆ ನೀಡಲಾಗುವುದು, ಅದನ್ನು ಮೀರಿದರೆ ನಿರ್ದಾಕ್ಷಿಣ್ಯವಾಗಿ ರಾಜೀನಾಮೆ ಅಂಗೀಕರಿಸಲು ಹೈಕಮಾಂಡ್ ಸೂಚಿಸಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ.