ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯು ಸಂಪೂರ್ಣವಾಗಿ ಭ್ರಷ್ಟಾಚಾರ, ಪ್ರಾದೇಶಿಕ ಅಸಮತೋಲನ ಹಾಗೂ ಮಹಿಳಾ ಪ್ರಾತಿನಿಧ್ಯದ ಕೊರತೆಯಿಂದ ಕೂಡಿದ್ದು, ಇದು ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಸರ್ಕಾರ ನೀಡಿದ ಬಹುಮಾನವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಆರೋಪಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿ 'ಪಾಂಚಜನ್ಯ'ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆಗೆ ಮಾಡಿದ ದೊಡ್ಡ ಅಪಮಾನವಾಗಿದೆ. ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವರ ಪಟ್ಟಿಯಲ್ಲಿ ಪ್ರಕಟಿಸಿ, ಬಳಿಕ ಕೊನೆ ಕ್ಷಣದಲ್ಲಿ ಕೈಬಿಟ್ಟಿರುವುದು ಅವರಿಗೆ ಮಾಡಿದ ವೈಯಕ್ತಿಕ ಮತ್ತು ರಾಜಕೀಯ ನೋವಾಗಿದೆ. "ಮೇ ಲಡ್ಕಿ ಹೂಂ, ಲಡ್ ಸಕ್ತಿ ಹೂಂ" ಎಂದು ಹೇಳುವ ಕಾಂಗ್ರೆಸ್, ಒಬ್ಬ ಮಹಿಳೆಗೂ ಸಂಪುಟದಲ್ಲಿ ಸ್ಥಾನ ನೀಡದಿರುವುದು ಪಕ್ಷದ ಮಾತು ಮತ್ತು ಕೃತಿಯ ನಡುವಿನ ಅಂತರವನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದರು.
ಈ ಸಂಪುಟವನ್ನು "ಯುವ ಸಂಪುಟ" ಎಂದು ಬಿಂಬಿಸಲಾಗುತ್ತಿದೆಯಾದರೂ, ನೂತನ ಸಚಿವರ ಸರಾಸರಿ ವಯಸ್ಸು 61 ವರ್ಷವಾಗಿದೆ. ಅಲ್ಲದೆ ಸಂಪುಟಕ್ಕೆ ಸೇರ್ಪಡೆಯಾದ ಹೆಚ್ಚಿನವರು ಹಿರಿಯ ರಾಜಕಾರಣಿಗಳ ಮಕ್ಕಳೇ ಹೊರತು ಸ್ವತಂತ್ರವಾಗಿ ನಾಯಕತ್ವ ಬೆಳೆಸಿಕೊಂಡ ಯುವಕರಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಿಬಿಐ ಅಥವಾ ಇಡಿ ಸಂಸ್ಥೆಗಳಿಂದ ಕ್ಲೀನ್ ಚಿಟ್ ಸಿಗದಿದ್ದರೂ, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಸರ್ಕಾರದ ಭ್ರಷ್ಟ ಮನಸ್ಥಿತಿಯನ್ನು ತೋರಿಸುತ್ತದೆ. ಚಿಕ್ಕಮಗಳೂರು ಸೇರಿದಂತೆ ಗದಗ್, ಯಾದಗಿರಿ, ರಾಯಚೂರು, ವಿಜಯನಗರ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದೆ ಪ್ರಾದೇಶಿಕ ಅಸಮತೋಲನ ಹೆಚ್ಚಾಗಿದೆ. ಸಂಪುಟ ವಿಸ್ತರಣೆಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣವಚನದಿಂದ ದೂರ ಉಳಿದಿರುವುದು, ಶಾಸಕರ ಬಹಿರಂಗ ಅಸಮಾಧಾನ ಹಾಗೂ ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆಗಳು ಸರ್ಕಾರದ ಆಡಳಿತ ಯಂತ್ರ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕೆಪಿಎಸ್ಸಿ ನೇಮಕಾತಿ ಅಕ್ರಮ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ ಹಾಗೂ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಬೀದಿ ಹೋರಾಟ ಮತ್ತು ಸದನದ ಒಳಗೂ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. ಈ ಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜು ಹಾಗೂ ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಉಪಸ್ಥಿತರಿದ್ದರು.