ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆಯ ಕಸರತ್ತು ತೀವ್ರಗೊಂಡಿದ್ದು, ನೂತನ ಸಚಿವ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರ ಸೇರ್ಪಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಬಿ. ಶ್ರೀರಾಮುಲು ಪಟ್ಟು ಹಿಡಿದಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶ್ರೀರಾಮುಲು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಡ ಮಕ್ಕಳ ಶಿಕ್ಷಣ ಹಾಗೂ ವಿದ್ಯಾರ್ಥಿವೇತನಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿರುವ ಕುರಿತು ನಾಗೇಂದ್ರ ಉತ್ತರ ನೀಡಬೇಕಿದೆ ಎಂದು ಹೇಳಿದರು. ಭ್ರಷ್ಟಾಚಾರ ಮುಚ್ಚಿಕೊಳ್ಳಲು ಯಾವುದೇ ಸಮುದಾಯ ಅಥವಾ ದಲಿತರ ಹೆಸರನ್ನು ಬಳಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದ ಅವರು, ಬಳ್ಳಾರಿಯ ಚಂದ್ರಶೇಖರ್ ಪ್ರಕರಣದ ಕುರಿತಾಗಿಯೂ ಸರ್ಕಾರ ಹಾಗೂ ನಾಗೇಂದ್ರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಆರೋಪ ಹೊತ್ತಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಬೇಕು ಹಾಗೂ ಅವರನ್ನು ಕೂಡಲೇ ಸಂಪುಟದಿಂದ ಹೊರಗಿಡಬೇಕು ಎಂದು ಆಗ್ರಹಿಸಿದ ಶ್ರೀರಾಮುಲು, ಈ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರಿಯಲಿದೆ ಎಂದರು. ನಿಯಮ ಹಾಗೂ ಮಾನದಂಡಗಳು ಪ್ರತಿಯೊಬ್ಬರಿಗೂ ಒಂದೇ ಆಗಿರಬೇಕು ಎಂದ ಅವರು, ಸಚಿವ నాగೇಂದ್ರ ರಾಜೀನಾಮೆ ನೀಡದಿದ್ದರೆ ಮುಂಬರುವ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.