ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಗುಂಡೇಟಿನ ಘಟನೆಯ ಕುರಿತು ಸರ್ಕಾರ ತಕ್ಷಣ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ವಿಧಾನ ಪರಿಷತ್ ಕಲಾಪದ ಮೂಲಕ ಹಾಗೂ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಅರಣ್ಯ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅವರು ಮನವಿ ಪತ್ರ ಸಲ್ಲಿಸಿದರು.
ಘಟನೆಗೆ ಸಂಬಂಧಿಸಿದಂತೆ ಸಮಗ್ರ, ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು. ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಗುಂಡೇಟಿಗೆ ಬಲಿಯಾದವರ ಕುಟುಂಬಗಳ ದುಃಖವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ 1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳ ಮಕ್ಕಳ ಭವಿಷ್ಯದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು, ಹಾಗೂ ಬಲಿಯಾದವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಸಂಪೂರ್ಣ ನೆರವನ್ನು ಸರ್ಕಾರದ ವತಿಯಿಂದಲೇ ಒದಗಿಸಬೇಕು ಎಂದು ಆಗ್ರಹಿಸಿದರು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ನ್ಯಾಯ, ಪರಿಹಾರ ಹಾಗೂ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.