image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಭ್ರಷ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ವಿಚಾರದಲ್ಲಿ ರಾಜ್ಯ ಸರ್ಕಾರದ ಮೊಂಡುತನವನ್ನು ಗಮನಿಸಿದರೆ, ಈ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಇರುವುದೇ ಭ್ರಷ್ಟರಿಂದ ಹಾಗೂ ಭ್ರಷ್ಟರಿಗಾಗಿ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಸರ್ಕಾರ ಇದಲ್ಲ, ಬದಲಾಗಿ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡಲು ಭ್ರಷ್ಟಾಚಾರಕ್ಕೋಸ್ಕರವೇ ಇರುವ ಸರ್ಕಾರವಾಗಿದೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ನಾಗೇಂದ್ರ ಅವರು ದಲಿತರ ಬಗ್ಗೆ ಕೇವಲ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದ ವಿಜಯೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿಯಾಗುವಾಗ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಅದು ದಲಿತ ಸಮುದಾಯಕ್ಕೆ ಸೇರಿದ ಹಣ ಎಂಬ ನೆನಪಾಗಲಿಲ್ಲವೇ ಎಂದು ತೀವ್ರವಾಗಿ ಪ್ರಶ್ನಿಸಿದರು. ಪ್ರತಿಪಕ್ಷಗಳ ಮೇಲೆ ದಲಿತರನ್ನು ಟಾರ್ಗೆಟ್ ಮಾಡುತ್ತಿರುವ ಸುಳ್ಳು ಆರೋಪ ಹೊರಿಸುವುದನ್ನು ಬಿಟ್ಟು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ಏನು ಬದಲಾವಣೆ ಆಗಿದೆ? ಅವರಿಗೆ ಜಾರಿ ನಿರ್ದೇಶನಾಲಯ (ED) ಕ್ಲೀನ್ ಚಿಟ್ ನೀಡಿದೆಯೇ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ ವಿಜಯೇಂದ್ರ, ಪ್ರಕರಣದ ತನಿಖೆ ಇನ್ನೂ ಜಾರಿಯಲ್ಲಿದ್ದರೂ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ರಾಜ್ಯದ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನಿಗೆ ಚೂರಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ನಡೆಯುತ್ತಿರುವ ಸದನ ಮುಗಿದ ನಂತರವೂ ಬಿಜೆಪಿ ತನ್ನ ಹೋರಾಟವನ್ನು ರಾಜ್ಯಾದ್ಯಂತ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ