image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ

ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಆಗಾಗ್ಗೆ ಬಲವಾದ ಮೇಲ್ಮೈ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚೇತರಿಸಿಕೊಂಡಿದೆಯಾದರೂ, ಈ ಬಾರಿ ನೈಋತ್ಯ ಮುಂಗಾರು ವಾಡಿಕೆಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯ ಪ್ರಕಾರ ಜೂನ್‌ನಲ್ಲಿ ಶೇ. 42, ಜುಲೈನಲ್ಲಿ ಶೇ. 29 ಹಾಗೂ ಆಗಸ್ಟ್‌ನಲ್ಲಿ ಇದುವರೆಗೆ ಶೇ. 20ರಷ್ಟು ಮಳೆ ಕೊರತೆಯಾಗಿದೆ. ಅತ್ಯಧಿಕ ಮಳೆಯಾಗುವ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಅಭಾವ ಶೇ. 40 ದಾಟಿದೆ. ಜೂನ್ 1ರಿಂದ ಇದುವರೆಗೆ ರಾಜ್ಯದ 189 ತಾಲ್ಲೂಕುಗಳಲ್ಲಿ ಭಾರಿ ಮಳೆ ಕೊರತೆ ಕಾಣಿಸಿಕೊಂಡಿದ್ದು, ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಪೆಟ್ಟು ಬಿದ್ದಿದೆ. ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಬರಪೀಡಿತ ತಾಲ್ಲೂಕುಗಳನ್ನು ಗುರುತಿಸಿದ್ದು, ಇನ್ನೊಂದು ವಾರದಲ್ಲಿ ಅಧಿಕೃತವಾಗಿ ಬರ ಘೋಷಣೆ ಮಾಡುವ ಸಾಧ್ಯತೆಯಿದೆ.

Category
ಕರಾವಳಿ ತರಂಗಿಣಿ