image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ: ಸಮಿತಿ ರಚನೆಗೆ ಸಿಜೆ ಭರವಸೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ: ಸಮಿತಿ ರಚನೆಗೆ ಸಿಜೆ ಭರವಸೆ

ಬೆಂಗಳೂರು : ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರು ಭರವಸೆ ನೀಡಿದ್ದಾರೆ. ಈ ಕುರಿತು ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿ’ಸೋಜಾ ಮಾಹಿತಿ ನೀಡಿದ್ದಾರೆ. ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಸ್ಥಾಪನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಎದುರಾಗಿರುವ ಅಡೆತಡೆಗಳ ಕುರಿತು ಚರ್ಚಿಸಲು ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿತು. ಈ ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೋನಾಲ್ಡ್ ಪ್ರವೀಣ್, ಮಾಜಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಘವೇಂದ್ರ ರಾವ್, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರು ಹಾಗೂ ಸಮಿತಿಯ ಪಿಆರ್‌ಒ ಎಂ. ಪಿ. ನೊರೋನ್ಹಾ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಅಗತ್ಯತೆಯ ಬಗ್ಗೆ ತಮಗೆ ಅರಿವಿದ್ದು, ವಾಸ್ತವಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ನಿಯೋಗ ಮಾಡಿದ ಮನವಿಯನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಗೆ ಕರಾವಳಿ ಭಾಗದ ಬಾರ್ ಅಸೋಸಿಯೇಷನ್‌ಗಳು, ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಮುಖಂಡರಿಂದ ವ್ಯಾಪಕ ಬೆಂಬಲ ಸಿಕ್ಕಿದೆ. ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಈ ವಿಷಯ ಪ್ರಮುಖವಾಗಿ ಚರ್ಚೆಯಾಗಲಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಭೇಟಿ ನೀಡಿ ಚರ್ಚಿಸುವುದಾಗಿ ತಿಳಿಸಿರುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಆಶಾದಾಯಕ ಬೆಳವಣಿಗೆಯಾಗಿದೆ.

Category
ಕರಾವಳಿ ತರಂಗಿಣಿ