image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಾಗಲಕೋಟೆಯಲ್ಲಿ ಸರಕಾರಿ ಶಾಲಾ ಛಾವಣಿ ಕುಸಿತ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬಾಗಲಕೋಟೆಯಲ್ಲಿ ಸರಕಾರಿ ಶಾಲಾ ಛಾವಣಿ ಕುಸಿತ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬಾಗಲಕೋಟೆ : ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಭಾಗ ಹಠಾತ್ತನೆ ಕುಸಿದು ಬಿದ್ದು 8 ಮಕ್ಕಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ಸಂದರ್ಭದಲ್ಲೇ ಈ ದುರಂತ ಸಂಭವಿಸಿದ್ದು, ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಾಲಾ ಕಟ್ಟಡದ ಶಿಥಿಲಾವಸ್ಥೆ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣವೆಂದು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದೆಡೆ ಈ ಘಟನೆಯನ್ನು ಖಂಡಿಸಿರುವ ವಿಪಕ್ಷ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ತೀರಾ ಅಯೋಮಯವಾಗಿದ್ದು, ಒಂದೆಡೆ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದ್ದರೆ, ಮತ್ತೊಂದೆಡೆ ನಿರ್ವಹಣೆ ಇಲ್ಲದೆ ಶಾಲಾ ಕಟ್ಟಡಗಳು ಕುಸಿದು ಬೀಳುತ್ತಿವೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನದಿಂದ ಮಕ್ಕಳ ಜೀವ ಮತ್ತು ಭವಿಷ್ಯಕ್ಕೆ ಯಾವುದೇ ಅಭಯವಿಲ್ಲದಂತಾಗಿದೆ. ಇಂತಹ ಸರಣಿ ಅನಾಹುತಗಳು ನಡೆಯುತ್ತಿದ್ದರೂ ಕಾಂಗ್ರೆಸ್ ಪ್ರಾಯೋಜಿತ ಬುದ್ಧಿಜೀವಿಗಳು ಹಾಗೂ ಅಂದೋಲನಜೀವಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

Category
ಕರಾವಳಿ ತರಂಗಿಣಿ