image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

₹1,281.80 ಕೋಟಿ ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಡಾ. ಸಿ.ಟಿ. ರವಿ ಸೂಚನೆ

₹1,281.80 ಕೋಟಿ ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಡಾ. ಸಿ.ಟಿ. ರವಿ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯ ಮೂರನೇ ಹಂತದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮಾಜಿ ಸಚಿವರೂ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ. ರವಿ ಸಿ.ಟಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿಕ್ಕಮಗಳೂರಿನ ಡಿಸಿಸಿ ಬ್ಯಾಂಕ್‌ನಲ್ಲಿ ಭದ್ರಾ ಉಪ ಜಲಾನಯನ ಪ್ರದೇಶದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗದಲ್ಲಿರುವ ಒಟ್ಟು 245 ಕೆರೆಗಳಿಗೆ ಭದ್ರಾ ಉಪ ಜಲಾನಯನ ಪ್ರದೇಶದಿಂದ ನೀರು ತುಂಬಿಸುವ ಬೃಹತ್ ಯೋಜನೆ ಇದಾಗಿದೆ. ಯೋಜನೆಯ ಮೊದಲ ಹಾಗೂ ಎರಡನೇ ಹಂತದ ಕಾಮಗಾರಿಗಳು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಪ್ರಸ್ತುತ ಮೂರನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಹಂತದ ಬಾಕಿ ಕೆಲಸಗಳನ್ನು ವೇಗಗೊಳಿಸಿ ಶೀಘ್ರದಲ್ಲೇ ಯೋಜನೆಯನ್ನು ಲೋಕಾರ್ಪಣೆಗೊಳಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಸಿ.ಟಿ, "ನಮ್ಮ ಭಾಗದ ರೈತರಿಗೆ ಸಹಕಾರಿಯಾಗುವ ಈ ಯೋಜನೆಯಡಿ ಪ್ರತಿಯೊಂದು ಕೆರೆಗೂ ನೀರು ತಲುಪಿಸುವುದು ಮತ್ತು ರೈತರ ಮೊಗದಲ್ಲಿ ಮಂದಹಾಸ ಮೂಡಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ. ₹1,281.80 ಕೋಟಿ ವೆಚ್ಚದ ನಮ್ಮ ಕನಸಿನ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಂಡು, 245 ಕೆರೆಗಳಿಗೂ ನೀರು ತಲುಪಿ ರೈತರ ಬದುಕಿನಲ್ಲಿ ಆಶಾಕಿರಣವಾಗಬೇಕು" ಎಂದು ಹೇಳಿದರು.

ಯೋಜನೆ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿದರೆ ಬಯಲುಸೀಮೆ ಭಾಗದ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚಾಗಲಿದ್ದು, ಅಂತರ್ಜಲ ಮಟ್ಟ ವೃದ್ಧಿಸಿ ರೈತರ ಆರ್ಥಿಕ ಪ್ರಗತಿಗೆ ದೊಡ್ಡ ಮಟ್ಟದ ಆಸರೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Category
ಕರಾವಳಿ ತರಂಗಿಣಿ