ಚಿಕ್ಕಮಗಳೂರು: ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಲೋಪದೋಷಗಳು ಹಾಗೂ ಕಳಪೆ ಕಾಮಗಾರಿಗಳು ನಡೆಯುತ್ತಿದ್ದು, ಇದರಿಂದ ಯೋಜನೆಯ ಮೂಲ ಉದ್ದೇಶವೇ ವಿಫಲವಾಗುತ್ತಿದೆ. ಈ ಬಗ್ಗೆ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 1,01,30,702 ಗ್ರಾಮೀಣ ಕುಟುಂಬಗಳಿದ್ದು, ಯೋಜನೆಯಡಿ ಇದುವರೆಗೆ ₹37,901.37 ಕೋಟಿ ವೆಚ್ಚದಲ್ಲಿ 63.74 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹೊಸ ನಳ ಸಂಪರ್ಕ ಕಲ್ಪಿಸಲಾಗಿದೆ. ಆದರೆ ತಳಮಟ್ಟದಲ್ಲಿ ಯೋಜನೆಯ ಅನುಷ್ಠಾನವು ದಾರಿ ತಪ್ಪಿದ್ದು, ಕೋಟ್ಯಂತರ ರೂಪಾಯಿ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಗುತ್ತಿಗೆದಾರರ ಕಾರ್ಯಕ್ಷಮತೆಯನ್ನು ಪರಿಶೀಲಿಸದೆ ಕಾಮಗಾರಿ ನೀಡುವುದು, ಒಬ್ಬನೇ ಗುತ್ತಿಗೆದಾರನಿಗೆ ಸಾಮರ್ಥ್ಯಕ್ಕಿಂತ ಹೆಚ್ಚಿನ ಟೆಂಡರ್ ನೀಡುವುದು ಮತ್ತು ನೀರಿನ ಮೂಲವನ್ನೇ ಖಚಿತಪಡಿಸಿಕೊಳ್ಳದೆ ಪೈಪ್‌ಲೈನ್ ಹಾಗೂ ಟ್ಯಾಂಕ್ ನಿರ್ಮಾಣ ಕೈಗೊಳ್ಳುತ್ತಿರುವುದು ಯೋಜನೆಯ ವೈಫಲ್ಯಕ್ಕೆ ಮುಖ್ಯ ಕಾರಣವಾಗಿದೆ.
ಹೊಸದಾಗಿ ನಿರ್ಮಿಸಲಾದ ಓವರ್‌ಹೆಡ್ ಟ್ಯಾಂಕ್‌ಗಳು ಸೋರಿಕೆಯಾಗುತ್ತಿದ್ದು, ವಿತರಣಾ ವ್ಯವಸ್ಥೆಯ ಲೋಪದಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ಮಾತ್ರ ನೀರು ಸಿಕ್ಕು, ಎತ್ತರದ ಪ್ರದೇಶದ ಮನೆಗಳು ನೀರಿಲ್ಲದೆ ಪರದಾಡುವಂತಾಗಿದೆ. ಹಲವು ಕಡೆ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದರೆ, ಇನ್ನು ಕೆಲವು ಕಡೆ ಪೈಪ್‌ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದು ಮರುಸ್ಥಾಪಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಕೇವಲ ದಾಖಲೆಗಳಲ್ಲಿ ಯೋಜನೆ ಪೂರ್ಣಗೊಂಡಿದೆ ಎಂದು ತೋರಿಸುವುದಕ್ಕಿಂತ, ಪ್ರತಿಯೊಂದು ಮನೆಗೂ ನಿಜವಾಗಿ ನೀರು ತಲುಪುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಬೇಕು. ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಳಪೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಯೋಜನೆ ಯಶಸ್ವಿಯಾಗಿ ಪ್ರತಿಯೊಬ್ಬ ಗ್ರಾಮೀಣ ನಿವಾಸಿಗೂ ತಲುಪುವಂತೆ ಮಾಡಲು ಸರ್ಕಾರ ಕೂಡಲೇ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು ಎಂದು ಡಾ. ಸಿ.ಟಿ. ರವಿ ಒತ್ತಾಯಿಸಿದ್ದಾರೆ.