ದಾವಣಗೆರೆ : ದಾವಣಗೆರೆ ಭಾಗಕ್ಕೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರು ನಡೆಸಿದ ಬೃಹತ್ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ರೈತ ಮುಖಂಡ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ದಾವಣಗೆರೆಯ ಶಿರಮಗೊಂಡನಹಳ್ಳಿ ಬಳಿ ರೈತರು ಟ್ರ್ಯಾಕ್ಟರ್‌ಗಳೊಂದಿಗೆ ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ, ಕಾಲುವೆಗಳಿಗೆ ನೀರು ಹರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸೂಕ್ತ ಮಳೆಯಾಗದ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಜನ-ಜಾನುವಾರುಗಳ ಅಗತ್ಯಕ್ಕಾಗಿ ನೀರು ಹರಿಸುವಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಕುರಿತು ಜಲಸಂಪನ್ಮೂಲ ಸಚಿವರು, ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಿದ ನಂತರ, ಗುರುವಾರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 2ರವರೆಗೆ ಒಟ್ಟು 15 ದಿನಗಳ ಕಾಲ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಲು ಭದ್ರಾ ಯೋಜನಾ ನೀರಾವರಿ ಸಮಿತಿ ಆದೇಶಿಸಿದೆ.
ಈ ತೀರ್ಮಾನದಿಂದ ದಾವಣಗೆರೆ, ಚನ್ನಗಿರಿ, ಹರಿಹರ, ಭದ್ರಾವತಿ, ಮಲೆಬೆನ್ನೂರು ಸೇರಿದಂತೆ ವಿವಿಧ ಭಾಗಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಒಣಗುತ್ತಿರುವ ಕೆರೆ-ಕಟ್ಟೆಗಳಿಗೆ ಮರುಜೀವ ಸಿಗಲಿದೆ. ಇಂದಿನಿಂದ ಹರಿಯುವ ನೀರು ಮುಂದಿನ ಎರಡು ದಿನಗಳಲ್ಲಿ ದಾವಣಗೆರೆ ಜಿಲ್ಲೆಯ ತಲುಪಲಿದ್ದು, ನೀರು ಸುಲಭವಾಗಿ ತಲುಪಲು ಕಾಲುವೆಗಳಲ್ಲಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಈ ಭಾಗದ ರೈತರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.