ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದನ್ನು ಖಂಡಿಸಿ, ಆಡಳಿತ ಪಕ್ಷದ ಹಿರಿಯ ಶಾಸಕರಾದ ಯಶವಂತರಾಯಗೌಡ ವಿ. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಅವರು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಆಡಳಿತ ಪಕ್ಷದ ಶಾಸಕರೊಬ್ಬರೇ ಸರ್ಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ತಮ್ಮ ರಾಜೀನಾಮೆ ಪತ್ರದಲ್ಲಿ ಕ್ಷೇತ್ರದ ತೀವ್ರ ಆರ್ಥಿಕ ಹಾಗೂ ಕೃಷಿ ಬಿಕ್ಕಟ್ಟನ್ನು ಉಲ್ಲೇಖಿಸಿರುವ ಅವರು, 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಂಡಿ ತಾಲೂಕು ತೀವ್ರ ಬರಗಾಲಕ್ಕೆ ತುತ್ತಾಗಿದೆ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಬಿದ್ದ ಅಲ್ಪ ಮಳೆಯನ್ನು ನಂಬಿ ಸಾಲಸೋಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದ ರೈತರು, ತದನಂತರ ಸಕಾಲಕ್ಕೆ ಮಳೆಯಾಗದ ಕಾರಣ ಬೆಳೆ ಒಣಗಿ ಹೋಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೆ, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆಯಾಗಿದೆ.
ಕಳೆದ ಆಗಸ್ಟ್ 28, 2026 ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಬಿಡುಗಡೆ ಮಾಡಿದ ರಾಜ್ಯದ 188 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಕೇವಲ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಮಾತ್ರ ಕೈಬಿಡಲಾಗಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಆಡಳಿತ ಪಕ್ಷದ ಶಾಸಕನಾಗಿದ್ದು ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸೂಕ್ಷ್ಮಮತಿಯಾಗಿ ಹಲವಾರು ಬಾರಿ ಮನವಿ ಮಾಡಿಕೊಂಡರೂ ತಮ್ಮ ಮಾಹಿತಿಗೆ ಮತ್ತು ಜನರ ಭಾವನೆಗಳಿಗೆ ಯಾವುದೇ ಬೆಲೆ ಸಿಕ್ಕಿಲ್ಲ ಎಂದು ಪಾಟೀಲ ಆಕ್ರೋಶ ಹೊರಹಾಕಿದ್ದಾರೆ. ಈಗಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರಗಳನ್ನು ಬಳಸುವವರಿಗೆ ಮಾತ್ರ ಮನ್ನಣೆ ಸಿಗುತ್ತಿದ್ದು, ಸೌಮ್ಯ ಸ್ವಭಾವದವರ ಕ್ಷೇತ್ರಗಳ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ ಎಂದು ಪತ್ರದಲ್ಲಿ ನೇರವಾಗಿ ಬರೆದಿದ್ದಾರೆ. ತಮ್ಮ ಕ್ಷೇತ್ರದ ಜನರ ಆಶೋತ್ತರಗಳಿಗೆ ಹಾಗೂ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದು, ಇದನ್ನು ತಕ್ಷಣವೇ ಅಂಗೀಕರಿಸುವಂತೆ ಸ್ಪೀಕರ್ ಅವರಿಗೆ ಕೋರಿದ್ದಾರೆ.