image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ: ಬೆಳಗಾವಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ: ಬೆಳಗಾವಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ

ಬೆಂಗಳೂರು:1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು  ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ.   “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‌ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು  ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬರುವ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಅಮೇರಿಕಾದ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್ ಓಬಾಮಾ ಅವರಿಗೆ ಪತ್ರ ಬರೆದು ಆಗಮಿಸಲು ಕೋರುವುದಾಗಿ ತಿಳಿಸಿದ್ದಾರೆ ಎಂದರು. 1924 ರ ಡಿಸೆಂಬರ್ 26-27 ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾಂಗ್ರೇಸ್ ಅಧಿವೇಶನ ಜರುಗಿದೆ. ಇದರ ನೆನಪನ್ನು ಮರುಸ್ಥಾಪಿಸಲು ಛಾಯಾಚಿತ್ರ ಪ್ರದರ್ಶನ, ಒಂದು ವರ್ಷ ಕಾಲ ವಸ್ತು ಪ್ರದರ್ಶನ, ಸ್ಮಾರಕ ಸ್ಥಂಭ ಸ್ಥಾಪನೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶಗಳಿವೆ ಎಂದರು.

ಗಾಂಧೀಜಿಯವರಿಗೆ ಆಪ್ತವಾದ ಗ್ರಾಮೀಣಾಭಿವೃದ್ಧಿ ಮತ್ತು ಸ್ವರಾಜ್ ಚಟುವಟಿಕೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಹಮ್ಮಿಕೊಳ್ಳಲಾಗುವುದು.  ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಮತ್ತು ಗಾಂಧೀ ವಿಚಾರಗಳ ಪರಿಣಿತರ ಸಲಹೆ ಪಡೆದು ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಎಚ್.ಕೆ. ಪಾಟೀಲ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಸಬಾಪತಿ ಬಿ.ಎಲ್. ಶಂಕರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್. ತಂಗಡಗಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಜವಳಿ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿಯವರ ನೀತಿ ಮತ್ತು ಕಾರ್ಯಕ್ರಮದ ಸಲಹೆಗಾರ ಬಿ.ಆರ್. ಪಾಟೀಲ, ಶಾಸಕರಾದ ಜೆ.ಟಿ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, 2024 ನೇ ಸಾಲಿನ ಗಾಂಧೀ ಸೇವಾ ಪ್ರಶಸ್ತಿ ಪುರಸ್ಕೃತ ಪ್ರೊ. ಜಿ.ಬಿ.  ಶಿವರಾಜು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಕಾರ್ಯಾಧ್ಯಕ್ಷ ಎನ್.ಆರ್. ವಿಶುಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ