ಬೆಂಗಳೂರು:ಮತದಾರರ ಪಟ್ಟಿಯಿಂದ ಹೆಸರು ಕಡಿತಗೊಳಿಸಲು ನಮೂನೆ 7 (Form 7) ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಕ್ರಮಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಹಾಗೂ ಕಾಂಗ್ರೆಸ್ ಪಕ್ಷ ನಡೆಸಿದ ಐತಿಹಾಸಿಕ ಧರಣಿ ಹಾಗೂ ಹೋರಾಟಕ್ಕೆ ಚುನಾವಣಾ ಆಯೋಗ ಮಣಿದಿದೆ. ರಾಜ್ಯದಲ್ಲಿ ಫಾರ್ಮ್ 6, 6ಎ ಮತ್ತು ಫಾರ್ಮ್ 7 ಬಳಸಿ ವ್ಯಾಪಕವಾಗಿ ನಡೆಯುತ್ತಿರುವ ಸುಳ್ಳು ಹಾಗೂ ಅಕ್ರಮ ಅರ್ಜಿಗಳ ಸಲ್ಲಿಕೆ ಬಗ್ಗೆ ಗಂಭೀರ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಜರುಗಿಸಲು ಚುನಾವಣಾ ಆಯೋಗ ರಾಜ್ಯದ ಎಲ್ಲಾ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಹೋದ್ಯೋಗಿಗಳು ನಿರಂತರವಾಗಿ ನಡೆಸಿದ ಸುದೀರ್ಘ ಧರಣಿ ಮತ್ತು ಪ್ರತಿಭಟನೆಯ ಫಲವಾಗಿ ಆಯೋಗವು ಈ ಕಠಿಣ ನಿರ್ಧಾರ ಕೈಗೊಂಡಿದೆ. ಪ್ರತಿಭಟನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಚುನಾವಣಾ ಆಯೋಗದ ಹೊಸ ನಿರ್ದೇಶನಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.
ಮೃತಪಟ್ಟವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೊಂದಾಯಿಸಿಕೊಂಡಿರುವ ಪ್ರಕರಣಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಕಾರಣಕ್ಕೂ ಫಾರ್ಮ್ 7 ಅರ್ಜಿಗಳನ್ನು ಅನುಮೋದಿಸುವಂತಿಲ್ಲ ಎಂದು ರಾಜ್ಯದ ಎಲ್ಲಾ ತಹಸೀಲ್ದಾರ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಮರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕೃತ ಮರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಂದು ವೇಳೆ ಎರಡು ಕಡೆ ನೋಂದಣಿಯಾಗಿದ್ದರೆ, ಎರಡನೇ ಎಪಿಕ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಫಾರ್ಮ್ 6, 6ಎ ಹಾಗೂ ಫಾರ್ಮ್ 7 ಗಳನ್ನು ಬಳಸಿ ಉದ್ದೇಶಪೂರ್ವಕವಾಗಿ ಮತ್ತು ಭಾರಿ ಪ್ರಮಾಣದಲ್ಲಿ ಸುಳ್ಳು ಅರ್ಜಿಗಳನ್ನು ಸೃಷ್ಟಿಸಿ ಸಲ್ಲಿಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ತನಿಖೆ ನಡೆಸಿ ಕ್ರಮ ಜರುಗಿಸಲು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ದೂರುಗಳು ನೈಜ್ಯವಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಉನ್ನತ ಮಟ್ಟದ ಸಭೆಯ ಬಳಿಕ ಈ ತೀರ್ಮಾನ ಹೊರಬಂದಿದ್ದು, ಇದು ನಮ್ಮ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ ಎಂದು ಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆದಿರುವ ಅತ್ಯಂತ ದೊಡ್ಡ ವಂಚನೆ ಹಾಗೂ ಸಂಚಾಗಿದೆ. ರಾಜ್ಯದ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲು ಕೆಲವರು ನಡೆಸುತ್ತಿರುವ ಕುತಂತ್ರವನ್ನು ನಮ್ಮ ದಾಖಲೆಗಳ ಮೂಲಕ ಸಾಬೀತುಪಡಿಸಿದ್ದೇವೆ. ಆಯೋಗವು ನಮ್ಮ ದಾಖಲೆಗಳನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದೆ ಎಂದರು.
ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗದಲ್ಲಿಯೇ ಅಧಿಕಾರಿಗಳ ಕಚೇರಿಯಲ್ಲಿ ಕುಳಿತು ಅಕ್ರಮದ ಬಗ್ಗೆ ಮನದಟ್ಟು ಮಾಡಿಕೊಡಲಾಗಿದೆ. ವಿರೋಧ ಪಕ್ಷಗಳ ಏನೇ ಟೀಕೆಗಳಿದ್ದರೂ ಕ್ಯಾರೆ ಎನ್ನದೆ, ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಾಕಿ 35 ಲಕ್ಷ ಮತದಾರರಿಗೆ ಅಗತ್ಯ ದಾಖಲೆಗಳನ್ನು ಒದಗಿಸಲು ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ರಾಜ್ಯದ ಪ್ರತಿ ಅರ್ಹ ಮತದಾರರಿಗೆ ಮತದಾನದ ಹಕ್ಕು ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.