image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕ್ರೀಡಾಪಟುಗಳ ಬಹುಮಾನ ಮೊತ್ತ ಪುನರ್ ಪರಿಶೀಲನೆಗೆ ರಾಜ್ಯ ಸರ್ಕಾರ ನಿರ್ಧಾರ

ಕ್ರೀಡಾಪಟುಗಳ ಬಹುಮಾನ ಮೊತ್ತ ಪುನರ್ ಪರಿಶೀಲನೆಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕದ ಓಟಗಾರ್ತಿ ಎಂ.ಆರ್. ಪೂವಮ್ಮ ಅವರು, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನೀಡಲಾಗುವ ಬಹುಮಾನ ಮೊತ್ತ ಹಾಗೂ ಪ್ರೋತ್ಸಾಹ ಧನ ಅತ್ಯಂತ ಕಡಿಮೆಯಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಕುರಿತು ಮರುಪರಿಶೀಲನೆಗೆ ಮುಂದಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು, ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ನಗದು ಬಹುಮಾನದ ವಿವರಗಳನ್ನು ಸರ್ಕಾರ ಈಗಾಗಲೇ ತರಿಸಿಕೊಂಡು ಪರಿಶೀಲನೆ ನಡೆಸಿದೆ ಎಂದು ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದ್ದು, ಕ್ರೀಡಾಪಟುಗಳಿಗೆ ಪರಿಷ್ಕೃತವಾಗಿ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಂಗಳವಾರ ಘೋಷಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಎಂ.ಆರ್. ಪೂವಮ್ಮ ಅವರು ಜಪಾನ್‌ನಲ್ಲಿದ್ದಾಗಲೇ ಅವರನ್ನು ಸಂಪರ್ಕಿಸಿ ಅಭಿನಂದಿಸಲು ಸರ್ಕಾರ ಪ್ರಯತ್ನಿಸಿತ್ತಾದರೂ, ತಾಂತ್ರಿಕ ಕಾರಣಗಳಿಂದ ಸಂಪರ್ಕ ಸಾಧಿಸಲು ಸಾಧ್ಯವಾಗಿರಲಿಲ್ಲ. ಆದರೆ, ಅವರು ಭಾರತಕ್ಕೆ ಮರಳಿದ ಒಂದೆರಡು ಗಂಟೆಯಲ್ಲೇ ಅವರೊಂದಿಗೆ ಮಾತನಾಡಿ ವಿವರ ಪಡೆದುಕೊಳ್ಳಲಾಗಿದೆ. ಪೂವಮ್ಮ ಅವರಷ್ಟೇ ಅಲ್ಲದೆ ರಾಜ್ಯದ ಇತರ ಅಥ್ಲೀಟ್‌ಗಳೊಂದಿಗೂ ಸಂವಹನ ನಡೆಸಲಾಗಿದ್ದು, ಅವರ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ