ಚಿಕಮಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ 2026ರ ಮೇ 22ರಂದು ಹೊರಡಿಸಲಾದ ಕಾರ್ಮಿಕ ಇಲಾಖೆಯ ಅಧಿಸೂಚನೆಯಂತೆ ಕನಿಷ್ಠ ವೇತನ ಜಾರಿಗೊಳಿಸಿ, ಪರಿಷ್ಕೃತ ವೇತನ ಸೌಲಭ್ಯ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
2026ರ ಅಕ್ಟೋಬರ್ 8ರಂದು ಬರೆದಿರುವ ಪತ್ರದಲ್ಲಿ, ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪರಿಷ್ಕರಣೆಯ ಪ್ರಯೋಜನ ತಲುಪಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ವೇತನದ ಸೌಲಭ್ಯವನ್ನು ತಕ್ಷಣವೇ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರ ತ್ವರಿತವಾಗಿ ಕ್ರಮ ಕೈಗೊಂಡು ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಡಾ. ರವಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರ ಬರೆದಿರುವ ಅವರು, ಕನಿಷ್ಠ ವೇತನವನ್ನು ಕೇವಲ ಎರಡು ತಿಂಗಳು ನೀಡಿ ನಂತರ ತಡೆಹಿಡಿದಿರುವುದು ನೌಕರರಲ್ಲಿ ತೀವ್ರ ನಿರಾಶೆ ಮೂಡಿಸಿದೆ ಎಂದು ಹೇಳಿದ್ದಾರೆ. ಸರ್ಕಾರದ ಆದೇಶಗಳನ್ನು ಸರ್ಕಾರಿ ಇಲಾಖೆಗಳೇ ಪಾಲಿಸದಿದ್ದರೆ ಖಾಸಗಿ ಸಂಸ್ಥೆಗಳನ್ನು ಪ್ರಶ್ನಿಸಲು ಸಾಧ್ಯವೇ ಎಂದು ಆಕ್ಷೇಪಿಸಿದ್ದಾರೆ. ವೇತನ ತಡೆಹಿಡಿದಿರುವುದರಿಂದ ನೊಂದಿರುವ ಸಾವಿರಾರು ಗ್ರಾಮ ಪಂಚಾಯತಿ ನೌಕರರು ಅಕ್ಟೋಬರ್ 12ರಂದು ಸಿದ್ದಗಂಗಾ ಮಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದು, ಕಾರ್ಮಿಕ ಇಲಾಖೆಯ ಅಧಿಸೂಚನೆಯಂತೆ ಕನಿಷ್ಠ ವೇತನ ಜಾರಿಗೊಳಿಸಲು ಆರ್ಥಿಕ ಇಲಾಖೆಯಿಂದ ತಕ್ಷಣವೇ ಅನುಮೋದನೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.