ಬೆಂಗಳೂರು : ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್ ಸ್ಟೋರೇಜ್ ಹಾಗೂ ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (SC-NBWL) ಸ್ಥಾಯಿ ಸಮಿತಿಯು ತಕ್ಷಣ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದರೊಂದಿಗೆ ಕಸ್ತೂರಿ ರಂಗನ್ ವರದಿ ವಿಚಾರವಾಗಿ ರಾಜ್ಯದಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಮನವಿ ಮಾಡಿದ್ದಾರೆ.
ನವದೆಹಲಿಯ ಪರಿಸರ ಭವನದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿದ ಸಿಎಂ ಶಿವಕುಮಾರ್, ರಾಜ್ಯದ ವಿವಿಧ ಯೋಜನೆಗಳು ಹಾಗೂ ಪ್ರಸ್ತಾಪಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿಯ 89ನೇ ಸಭೆಯಲ್ಲಿ ಎತ್ತಲಾದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರವು ಸ್ಪಷ್ಟನೆ ನೀಡಿದೆ. ಬೆಂಗಳೂರಿನ 'ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್' (NIAS) ಸಲ್ಲಿಸಿದ ತಾಂತ್ರಿಕ ವರದಿ ಸೇರಿದಂತೆ ಅಗತ್ಯವಿರುವ ಎಲ್ಲಾ ದಾಖಲೆಗಳು ಹಾಗೂ ಉತ್ತರಗಳನ್ನು ಒದಗಿಸಲಾಗಿದ್ದು, ಯೋಜನೆಗೆ ಶೀಘ್ರ ಅನುಮತಿ ನೀಡಬೇಕೆಂದು ಅವರು ಪ್ರತಿಪಾದಿಸಿದರು.