ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ದುಬಾರಿಗೊಳಿಸುತ್ತಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಆರೋಪಿಸಿದ್ದಾರೆ. ಒಂದು ಕೈಯಲ್ಲಿ ಗ್ಯಾರಂಟಿ ಕೊಡುಗೆ ನೀಡುತ್ತಿದ್ದೇವೆ ಎಂದು ಪ್ರಚಾರ ಮಾಡುತ್ತಾ, ಇನ್ನೊಂದು ಕೈಯಲ್ಲಿ ಅಬಕಾರಿ, ತೆರಿಗೆ ಮತ್ತು ದರ ಹೆಚ್ಚಳದ ಮೂಲಕ ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
ಇತ್ತೀಚೆಗೆ ನಂದಿನಿ ಹಾಲು, ಮೊಸರು ಹಾಗೂ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಶ್ರಮಿಕರು, ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಭಾಗದ ಜನರಿಗೆ ಹೊರೆಯಾಗಿದೆ. ಕೇವಲ ಸಾರಿಗೆ ಅಥವಾ ಹಾಲಿನ ದರವಷ್ಟೇ ಅಲ್ಲದೆ, ಇಂಧನ ಮೇಲಿನ ತೆರಿಗೆ, ವಿದ್ಯುತ್, ನೀರು, ಮೆಟ್ರೋ ಪ್ರಯಾಣ, ಆಸ್ತಿ ತೆರಿಗೆ ಹಾಗೂ ಗೃಹ ನಿರ್ಮಾಣ ಸಾಮಗ್ರಿಗಳ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ ಎಂದು ರವಿ ಬೆರಳು ಮಾಡಿ ತೋರಿಸಿದ್ದಾರೆ.
ಸಾರಿಗೆ ಮತ್ತು ಇಂಧನ ವೆಚ್ಚ ಹೆಚ್ಚಾದಾಗ ಪ್ರತಿಯೊಂದು ಸರಕು ಸಾಗಣೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಾಗಿ ಅಂತಿಮವಾಗಿ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆಯೇ ಗರಿಷ್ಠ ಆರ್ಥಿಕ ಹೊರೆ ಬೀಳಲಿದೆ. ಜನರ ಆದಾಯ ಮತ್ತು ಉದ್ಯೋಗಾವಕಾಶಗಳು ಹೆಚ್ಚಾಗದ ಈ ಸಮಯದಲ್ಲಿ ಪ್ರತಿಯೊಂದು ಸೇವೆಯ ದರ ಏರಿಸುವುದು ಜನಪರ ಆಡಳಿತದ ಲಕ್ಷಣವಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಜಾರಿಗೆ ತಂದಿರುವ ಜನವಿರೋಧಿ ದರ ಏರಿಕೆಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ಗ್ಯಾರಂಟಿಗಳ ಹೆಸರಿನಲ್ಲಿ ಸ್ವಯಂ ಪ್ರಚಾರ ಪಡೆಯುವುದನ್ನು ಬಿಟ್ಟು, ಜನರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಲು ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದ್ದಾರೆ.