image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಶಿವಮೊಗ್ಗ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 17 ವರ್ಷದೊಳಗಿನ ಪ್ರೌಢಶಾಲೆಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟು ರೋಹಿತ್ ಗೌಡ ಬಿ. ಸಿ. ಅವರು ಉದ್ದ ಜಿಗಿತ, ತ್ರಿವಿಧ ಜಿಗಿತ ಹಾಗೂ 110 ಮೀಟರ್ ಹರ್ಡಲ್ಸ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸುವುದರ ಜೊತೆಗೆ 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಮೂಲಕ ಕ್ರೀಡಾಕೂಟದಲ್ಲಿ ವೈಯಕ್ತಿಕ ಸಮಗ್ರ ಪ್ರಶಸ್ತಿಯನ್ನು (ವೈಯಕ್ತಿಕ ಚಾಂಪಿಯನ್) ತಮ್ಮದಾಗಿಸಿಕೊಂಡಿದ್ದಾರೆ.

ಮತ್ತೊಬ್ಬ ಕ್ರೀಡಾಪಟು ವಂಶಿ ಟಿ. ಅವರು 100 ಮೀಟರ್ ಓಟದಲ್ಲಿ ಪ್ರಥಮ ಹಾಗೂ 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ ಭೀಷ್ಮ ಎಂ. ಅವರು ತ್ರಿವಿಧ ಜಿಗಿತದಲ್ಲಿ ತೃತೀಯ ಹಾಗೂ 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂವರೂ ವಿದ್ಯಾರ್ಥಿಗಳು ಇದೇ ತಿಂಗಳು 12 ರಿಂದ 16 ರವರೆಗೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆಯಲಿರುವ 70ನೇ ರಾಷ್ಟ್ರಮಟ್ಟದ ಬಾಲಕರ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ