ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬಹುದಿನಗಳಿಂದ ನಿಗಮ-ಮಂಡಳಿ ನೇಮಕಾತಿಗಾಗಿ ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಿಗೆ ಸರ್ಕಾರ ಈ ಮೂಲಕ ಅವಕಾಶ ಕಲ್ಪಿಸಿದೆ. ಉಪಚುನಾವಣೆಗಳ ಹೊಸ್ತಿಲಲ್ಲೇ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ಗಮನ ಸೆಳೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಬಳಿಕ ಬುಧವಾರ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಆದೇಶ ಹೊರಬಿದ್ದಿದೆ.
ರಾಜ್ಯದ ವಿವಿಧ ವಿದ್ಯುತ್ ನಿಗಮಗಳು, ಸಾರಿಗೆ ಸಂಸ್ಥೆಗಳು, ಅಭಿವೃದ್ಧಿ ನಿಗಮಗಳು ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ನಿಗಮಗಳಿಗೂ ರಾಜ್ಯದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಗಿದೆ.
ಮುಖ್ಯಮಂತ್ರಿಯವರ ಟಿಪ್ಪಣಿ ಆದೇಶದ ಹಿನ್ನೆಲೆಯಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಅನಧಿಕೃತ ಟಿಪ್ಪಣಿ ರವಾನಿಸಿದ್ದಾರೆ. ಪಟ್ಟಿಯಲ್ಲಿ ಹೆಸರಿರುವ ಎಲ್ಲಾ 428 ಮಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಬಂಧಪಟ್ಟ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸುವಂತೆ ಸೂಚಿಸಲಾಗಿದೆ.