ಬೇಲೂರು: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಭಾನುವಾರ ಬೆಳಿಗ್ಗೆ ತಾಲ್ಲೂಕಿನ ಕೋಗಿಲೆಮನೆ ಗ್ರಾಮದ ಸಮೀಪ 50ಕ್ಕೂ ಹೆಚ್ಚು ಕಾಡಾನೆಗಳ ಬೃಹತ್ ಹಿಂಡು ಕಾಣಿಸಿಕೊಂಡು ಸ್ಥಳೀಯರಲ್ಲಿ ತೀವ್ರ ಭೀತಿ ಹುಟ್ಟಿಸಿದೆ. ಶನಿವಾರ ಸಂಜೆಯಷ್ಟೇ ಚೌಡನಹಳ್ಳಿ ಬಳಿ ಕಾಡಾನೆ ದಾಳಿಗೆ ಜಯಮ್ಮ ಎಂಬ ಮಹಿಳೆ ಬಲಿಯಾಗಿದ್ದರು. ಆ ದುರ್ಘಟನೆಯ ಆಘಾತ ಮಾಸುವ ಮುನ್ನವೇ ಮರಿಗಳೊಂದಿಗೆ ದೊಡ್ಡ ಸಂಖ್ಯೆಯಲ್ಲಿ ಗಜಪಡೆ ಕಾಫಿ ತೋಟಗಳು, ಜಮೀನು ಹಾಗೂ ರಸ್ತೆ ಬದಿಯಲ್ಲಿ ಬೀಡುಬಿಟ್ಟಿರುವುದು ಜನರ ನಿದ್ದೆಗೆಡಿಸಿದೆ.
ಪ್ರಸ್ತುತ ಕಾಫಿ ಕೊಯ್ಲು ನಡೆಯುತ್ತಿದ್ದರೂ ಆನೆಗಳ ಭಯದಿಂದ ಕೂಲಿ ಕಾರ್ಮಿಕರು ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದು, ಅಪಾರ ಪ್ರಮಾಣದ ಕಾಫಿ, ಮೆಣಸು ಮತ್ತು ಭತ್ತದ ಬೆಳೆ ನಾಶವಾಗುವ ಆತಂಕ ಎದುರಾಗಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ (ETF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟಬೇಕು ಮತ್ತು ನಿರಂತರ ಕಾಡಾನೆ-ಮಾನವ ಸಂಘರ್ಷಕ್ಕೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.