ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ನೂತನವಾಗಿ ಚುನಾಯಿತರಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ನೂತನ ಸದಸ್ಯರನ್ನು ಅಭಿನಂದಿಸಿ ಶುಭ ಕೋರಿದರು.
ಸಮಾಜದ ಪ್ರಗತಿಯಲ್ಲಿ ಶಿಕ್ಷಕರು ಮತ್ತು ಪದವೀಧರರು ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗುವುದರ ಜೊತೆಗೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಪರಮೇಶ್ವರ್ ಆಶಿಸಿದರು. ಅಲ್ಲದೆ, ವಿಧಾನ ಪರಿಷತ್ತಿನ ಘನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಉಪಸಭಾಪತಿ ಉಮಾಶ್ರೀ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಉಪಸ್ಥಿತರಿದ್ದರು.